ಹನೂರು:- ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಧನಗೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ತಮಿಳುನಾಡಿನ ಕೊಯಮತ್ತೂರು ಮೂಲದ ವಿಘ್ನೇಶ್ ಮೃತ ವ್ಯಕ್ತಿ. ಈತ ಕಾರಿನಲ್ಲಿ ಕೊಳ್ಳೇಗಾಲ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದು ಮಳವಳ್ಳಿ ಕಡೆಯಿಂದ ಬಂದ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ (ಕೆಎ-10, ಎ-7653) ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ವಿಘ್ನೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಉಳಿದಂತೆ ಬಸ್‌ನ ಚಾಲಕ ರಮೇಶ್ ಹಾಗೂ ಬಸ್‌ನಲ್ಲಿದ್ದ ಕೊಳ್ಳೇಗಾಲ ತಾಲೂಕಿನ ಪಾಳ್ಯ ಮೂಲದ ಜಯರಾಮ್ ಎಂಬುವವರಿಗೆ ಗಾಯಗಳಾಗಿದ್ದು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳೀಯರ ಸಹಾಯದಿಂದ ಕಾರಿನಲ್ಲಿದ್ದ ಮೃತದೇಹವನ್ನು ಹೊರತೆಗೆದರು. ನಂತರ ಮೃತದೇಹವನ್ನು ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





