ಮೈಸೂರು: ಕಬಿನಿ ಜಲಾಶಯದಿಂದ 25 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಪ್ರವಾಹಕ್ಕೆ ಗದ್ದೆಗಳು ಮುಳುಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ.
ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಬಿನಿ ಜಲಾಶಯದ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಕಪಿಲಾ ನದಿಗೆ 25 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದ್ದು, ನಂಜನಗೂಡು ತಾಲ್ಲೂಕಿನ ಹಲವು ಗ್ರಾಮಗಳ ಭತ್ತದ ಗದ್ದೆಗಳು ನೀರಿನಲ್ಲಿ ಮುಳುಗಡೆಯಾಗಿವೆ.
ತಾಲ್ಲೂಕಿನ ಸುತ್ತೂರು, ಬೊಕ್ಕಹಳ್ಳಿ, ಮೂಡಹಳ್ಳಿ, ತಾಯೂರು, ಹೊಸಕೋಟೆ, ಸುತ್ತ ಮುತ್ತ ನೂರಾರು ಎಕರೆ ಪ್ರದೇಶ ನೀರಿನಲ್ಲಿ ಮುಳುಗಡೆಯಾಗಿದ್ದು, ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ. ಬೆಳೆ ನಾಶದಿಂದ ಕಂಗಾಲಾಗಿರುವ ರೈತರು ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.





