ಪಾಂಡವಪುರ: ನಾನು ಶಾಸಕನಾಗಿ ಕೆಲಸ ಮಾಡುವ ಸಂದರ್ಭದಲ್ಲಿ ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಕೀಯ ಮಾಡಿಲ್ಲ. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಸಚಿವ ಎನ್.ಚಲುವರಾಯಸ್ವಾಮಿಗೆ ಜನತೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಾಗ್ದಾಳಿ ನಡೆಸಿದರು.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನತೆ ಐವತ್ತು ಸಾವಿರ ಮತಗಳಿಂದ ಸೋಲಿಸಿದ್ದಾರೆ. ಚುನಾವಣೆಯಲ್ಲಿ ನಾನು ಗೆದ್ದಿದ್ದೇನೆ, ಸೋತಿದ್ದೇನೆ. ರಾಜಕೀಯದಲ್ಲಿ ಅಧಿಕಾರ ಶಾಶ್ವತವಲ್ಲ. ಕಾಲಚಕ್ರದಲ್ಲಿ ಇಂದು ಮೇಲಿರುವವರು ಕೆಳಗಡೆ ಬರಲೇಬೇಕು. ಸಚಿವ ಎನ್.ಚಲುವರಾಯಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬಿಟ್ಟರೆ ನಾನೇ ಒಕ್ಕಲಿಗ ಸಮುದಾಯದ ಪರಮೋಚ್ಚ ನಾಯಕ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಎಂದು ಹರಿಹಾಯ್ದರು.





