Mysore
22
mist

Social Media

ಮಂಗಳವಾರ, 13 ಜನವರಿ 2026
Light
Dark

ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕ್ರಮ’

‘ಆಂದೋಲನ’ದೊಂದಿಗೆ ಮಾತನಾಡಿದ ಹನೂರು ಶಾಸಕ ಎಂ.ಆರ್.ಮಂಜುನಾಥ್ ಭರವಸೆ

ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗಿದೆ. ಶುಕ್ರವಾರ ಜಿಪಂ ಸಿಇಒ ಹಾಗೂ ಪಿಸಿಸಿಎಫ್ ನೇತೃತ್ವದಲ್ಲಿ ಸಭೆ ಕರೆಯಲಾಗುವುದು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

‘ಆಂದೋಲನ’ ದಿನಪತ್ರಿಕೆಯ ಬುಧವಾರದ ಸಂಚಿಕೆಯಲ್ಲಿ ಪ್ರಕಟವಾದ ‘ಹನೂರು ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ತತ್ವಾರ’ ಎಂಬ ಶೀರ್ಷಿಕೆಯಡಿ ಪ್ರಕಟವಾದ ವರದಿಗೆ ಸ್ಪಂದಿಸಿ ಪತ್ರಿಕೆಯೊಡನೆ ಅವರು ಮಾತನಾಡಿದರು.

ಹನೂರು ಕ್ಷೇತ್ರ ವ್ಯಾಪ್ತಿಯ ರಾಮಾಪುರ ಹೋಬಳಿ ವ್ಯಾಪ್ತಿಯಲ್ಲಿ ವಾಡಿಕೆಗಿಂತ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಅಂತರ್ಜಲ ಮಟ್ಟ ಕಡಿಮೆಯಾಗಿ, ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಈಗಾಗಲೇ ಸುಮಾರು ೧ ಕೋಟಿ ರೂ. ವೆಚ್ಚದಲ್ಲಿ ಕೊಳವೆಬಾವಿಗಳನ್ನು ಕೊರೆಸುವ ಮೂಲಕ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಕೆಲವು ಕಡೆ ಬೋರ್‌ವೆಲ್‌ಗಳು ವಿಫಲವಾಗಿದ್ದು, ಅಂತಹ ಸ್ಥಳಗಳಲ್ಲಿ ಟ್ಯಾಂಕರ್ ಹಾಗೂ ಖಾಸಗಿ ಬೋರ್ವೆಲ್‌ಗಳ ಮುಖಾಂತರ ನೀರು ಪೂರೈಕೆ ಮಾಡಲಾಗುತ್ತಿದೆ. ಇದಲ್ಲದೆ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೋರ್‌ವೆಲ್ ಕೊರೆಸಲು ಸ್ಥಳ ಪರಿಶೀಲನೆ ಮಾಡಿದ್ದಾರೆ. ಮುಂದಿನ ವಾರ ಬಹುತೇಕ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.

ಕಳೆದ ೧೫ ವರ್ಷಗಳಿಂದ ಉಡುತೊರೆಹಳ್ಳ ಜಲಾಶಯದ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಲ್ಲಿಗಿಡಗಂಟಿಗಳು ಬೆಳೆದು ಜಲಾಶಯದಿಂದ ನೀರು ಬಿಟ್ಟಾಗ ಸರಾಗವಾಗಿ ನಾಲೆಗಳಲ್ಲಿ ನೀರು ಹರಿಯುತ್ತಿರಲಿಲ್ಲ. ಇದನ್ನು ಮನಗಂಡು ಮನರೇಗಾ ಯೋಜನೆಯಡಿ ಗ್ರಾಪಂ ವತಿಯಿಂದ ನಾಲೆಗಳಲ್ಲಿದ್ದ ಗಿಡಗಂಟಿಗಳನ್ನುತೆರವುಗೊಳಿಸಿದ್ದರಿಂದ ಕೊನೆಯ ಭಾಗದ ರೈತರ ಜಮೀನುಗಳಿಗೂ ಜಲಾಶಯದ ನೀರು ಹರಿದು ಹೋಗಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿದೆಎಂದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಜೆಜೆಎಂ ಕಾಮಗಾರಿ ಪೂರ್ಣವಾಗದೆ ಇರುವುದರಿಂದ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧೀಕಾರಿಗಳು ಹಾಗೂ ಜಿಪಂ ಸಿಇಒ ಮೋನಾ ರೋತ್‌ರವರ ಜೊತೆ ಪಟ್ಟಣದಲ್ಲಿ ಸಭೆ ನಡೆಸಿ ಕಾಮಗಾರಿ ವಿಳಂಬವಾಗಿರುವ ಕಡೆ ವೇಗ ಕೊಡಿಸಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಕ್ತ ಕ್ರಮ ವಹಿಸಲಾಗುವುದು ಎಂದರು.

ರಾಮಾಪುರ ಹೋಬಳಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಈಗಾಗಲೇ ಗಮನಕ್ಕೆ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಇನ್ನೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದರು.

೧೫ ವರ್ಷಗಳಲ್ಲಿ ಆಗದೆ ಇರುವ ಕೆಲವು ಅಭಿವೃದ್ಧಿ ಕೆಲಸಗಳನ್ನು ನಾನು ೨ ವರ್ಷಗಳಲ್ಲಿಯೇ ಮಾಡಿದ್ದೇನೆ. ಕೆಲವೊಮ್ಮೆ ಒಂದು ಕೆಲಸವನ್ನು ಒಂದೇ ಬಾರಿಗೆ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಹನೂರು ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ ಅತಿ ಹೆಚ್ಚು ವಿಸ್ತೀರ್ಣ ಹೊಂದಿರುವುದರಿಂದ ಹೆಚ್ಚಿನ ಅನುದಾನದ ಅವಶ್ಯವಿದೆ. ಹೀಗಾಗಿ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರುಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಮತ್ತಷ್ಟು ಹೆಚ್ಚಿನ ಅನುದಾನ ತಂದು ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿ, ರೈತರಿಗೆ ವ್ಯವಸಾಯ ಮಾಡಲು ಶಾಶ್ವತ ನೀರಾವರಿ ಯೋಜನೆಯನ್ನು ಅನುಷ್ಠಾನ ಮಾಡಿಯೇ ಮಾಡುತ್ತೇನೆ ಎಂದರು.

ಕ್ಷೇತ್ರದ ಜನರು ತಮ್ಮ ಗ್ರಾಮದಲ್ಲಿರುವ ಸಮಸ್ಯೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಮೂಲಕಗಮನ ಸೆಳೆಯುತ್ತಿದ್ದಾರೆ. ನಾನು ಸಹ ಅದನ್ನು ಗಮನಿಸಿಸಮಸ್ಯೆಗಳನ್ನು ಪರಿಹರಿಸಲು ಯತ್ನಿಸುತ್ತಿದ್ದೇನೆ ಎಂದರು.

” ಕೆಂಪಯ್ಯನಹಟ್ಟಿ ಗ್ರಾಮದ ಐವರು ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿಮಾಡಿ, ಕಾವೇರಿ ಮತ್ತು ಕಬಿನಿ ಜಲಾಶಯಗಳಿಂದ ಕೆರೆಗಳಿಗೆ ನೀರು ತುಂಬಿಸುವಂತೆ ಮನವಿ ಪತ್ರ ಬರೆದಿರುವುದು ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಶುಕ್ರವಾರ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಭೇಟಿ ಮಾಡಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.”

-ಎಂ.ಆರ್.ಮಂಜುನಾಥ್, ಶಾಸಕರು

Tags:
error: Content is protected !!