ತುಮಕೂರು : ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಮಂಗಳವಾರ ಗೊಬ್ಬರ ತುಂಬಿದ್ದ ಲಾರಿಯೊಂದು ರಸ್ತೆ ಬದಿಯ ಬೇಕರಿಗೆ ನುಗ್ಗಿದ ಪರಿಣಾಮ ಮೂವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಮಂಗಳವಾರ ಬೆಳಿಗ್ಗೆ ಗೊಬ್ಬರ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೇಕರಿಗೆ ನುಗ್ಗಿದೆ. ಭೀಕರ ಅಪಘಾತದಲ್ಲಿ ಕಾಟೇನಹಳ್ಳಿ ನಿವಾಸಿ ರಂಗಶಾಮಯ್ಯ(65) ಹಾಗೂ ಪುರದಳ್ಳಿಯ ಬೈಲಪ್ಪ(65) ಸೇರಿ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಕಾಂತರಾಜು, ಸಿದ್ಧಗಂಗಮ್ಮ, ಜಯಣ್ಣ ಹಾಗೂ ಮೋಹನ್ ಕುಮಾರ್ ಅವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು, ಚಾಲಕನನ್ನು ಬಂಧಿಸಿದ್ದಾರೆ.
ಇನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ತೀವ್ರ ಸಂತಾಪ ಸೂಚಿಸಿದ್ದು, ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಗೊಬ್ಬರ ತುಂಬಿದ್ದ ಲಾರಿ ಅಂಗಡಿಗೆ ನುಗ್ಗಿದ ಪರಿಣಾಮ ಸಂಭವಿಸಿದ ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಸುದ್ದಿ ತಿಳಿದು ಆಘಾತವಾಯಿತು ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ. ದುಃಖತಪ್ತ ಕುಟುಂಬವರ್ಗದವರಿಗೆ ನನ್ನ ತೀವ್ರ ಸಂತಾಪಗಳು ಎಂದು ಪೋಸ್ಟ್ ಮಾಡಿದ್ದಾರೆ.





