ಮಂಡ್ಯ: ಮುಂಗಾರು ಮಳೆ ಅಬ್ಬರಿಸಿ ಬೊಬ್ಬರಿಯುತ್ತಿರುವ ಪರಿಣಾಮ ಕೆಆರ್‌ಎಸ್ ಸಂಪೂರ್ಣ ಭರ್ತಿಯಾಗಿದ್ದು, ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದು, ಹೊರಹರಿವನ್ನು ಏರಿಕೆ ಮಾಡಲಾಗಿದೆ.
ಪರಿಣಾಮ ಜೀವನದಿ ಕಾವೇರಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ದೃಷ್ಟಿಯಿಂದ ಕಾವೇರಿ ನದಿಯಲ್ಲಿ ಪಿಂಡ ಪ್ರದಾನಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ.
ಇದರ ಜೊತೆಗೆ ಕಾವೇರಿ ನದಿ ಪಾತ್ರದಲ್ಲಿ ಇರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದ್ದು, ಸೇತುವೆಗಳ ಬಳಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.





