ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ.
ಜಲಾಶಯದ ಇಂದಿನ ಒಳಹರಿವು 35,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 40,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 83 ಅಡಿಗಳಾಗಿದೆ.
ಜಲಾಶಯದ ಭದ್ರತೆಯ ದೃಷ್ಟಿಯಿಂದ ಹೊರಹರಿವನ್ನು ಹೆಚ್ಚಳ ಮಾಡಲಾಗಿದ್ದು, ಕಪಿಲಾ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ಕಪಿಲಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಹದಿನಾರು ಕಾಲು ಮಂಟಪ ಮುಳುಗಡೆಯಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.





