ರಾಂಚಿ: ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 18 ಕನ್ವಾರಿಯಾಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಬೆಳಗಿನ ಜಾವ 4.30ರ ಸುಮಾರಿಗೆ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್ ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಶ್ರಾವಣ ಕನ್ವರ್ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದ ಭಕ್ತರನ್ನು ಕರೆದೊಯ್ಯುತ್ತಿದ್ದ 32 ಆಸನಗಳ ಬಸ್ ಅಪಘಾತಕ್ಕೀಡಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವು-ನೋವುಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಹೇಳಿದ್ದಾರೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತ್ವರಿತ ಚಿಕಿತ್ಸೆಗಾಗಿ ಸಾಗಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.





