ಬೆಂಗಳೂರು : ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಜಾತಿಗಣತಿಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ, ಎರಡು ದಿನ ವಿವರವಾದ ವಾದಗಳನ್ನು ಆಲಿಸಿತು. ಅಂತಿಮವಾಗಿ ಇಂದು ಜಾತಿ ಗಣತಿಗೆ ತಡೆ ನೀಡಲು ನಿರಾಕರಿಸಿ ಮಧ್ಯಂತರ ಆದೇಶ ಹೊರಡಿಸಿದೆ.
ಇದನ್ನೂ ಓದಿ:-ಸಮೀಕ್ಷೆ ಕಾರ್ಯದಿಂದ ವ್ಯತ್ಯಯವಾಗದು ವಿದ್ಯುತ್ ಬಿಲ್ : ಬೆಸ್ಕಾಂ ಸ್ಪಷ್ಟನೆ
ಆದರೆ ರಾಜ್ಯ ಸರ್ಕಾರದ ಜಾತಿಗಣತಿ ಸಮೀಕ್ಷೆ ನಡೆಸಲು ಕೆಲವು ಷರತ್ತುಗಳನ್ನು ಹೈಕೋರ್ಟ್ ವಿಧಿಸಿದ್ದು, ದತ್ತಾಂಶವನ್ನು ರಾಜ್ಯ ಸರ್ಕಾರ ಸೇರಿ ಯಾರಿಗೂ ಬಹಿರಂಗಪಡಿಸಬಾರದು. ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು ಎಂದು ಸೂಚಿಸಿದೆ. ಜನರು ಸ್ವಯಂಪ್ರೇರಣೆಯಿಂದ ಮಾಹಿತಿ ನೀಡಿದರಷ್ಟೇ ಪಡೆಯಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು ಎಂದು ಹೈಕೋರ್ಟ್ ಮಹತ್ವದ ಷರತ್ತು ವಿಧಿಸಿ, ವಿಚಾರಣೆಯನ್ನು ಡಿಸೆಂಬರ್ ಎರಡನೇ ವಾರಕ್ಕೆ ಮುಂದೂಡಿದೆ.
ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಈ ಅರ್ಜಿಗಳು ಯಾವುದೇ ಸಾಂವಿಧಾನಿಕ ನಿಬಂಧನೆಗಳನ್ನು ಅಥವಾ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆ, 1995 ರ ನಿರ್ದಿಷ್ಟ ವಿಭಾಗಗಳನ್ನು ಗುರಿಯಾಗಿಸಿಕೊಂಡಿಲ್ಲ. ಆದರೆ ವಾಸ್ತವವಾಗಿ ಸರ್ಕಾರ ಅಧಿಕಾರ ಚಲಾಯಿಸುವುದನ್ನು ತಡೆಯಲು ಪ್ರಯತ್ನಿಸುತ್ತಿವೆ ಎಂದು ಹೇಳಿದರು.
ಅರ್ಜಿದಾರರು ಎತ್ತಿರುವ ಆಕ್ಷೇಪಣೆಗಳು, ಸಮೀಕ್ಷೆಯು “ಅವೈಜ್ಞಾನಿಕ” ಎಂಬ ಸಾಮಾನ್ಯ ಆರೋಪಗಳಾಗಿವೆ. ಸಮೀಕ್ಷೆಯ ವರದಿಯನ್ನು ಸಾರ್ವಜನಿಕಗೊಳಿಸಿದ ನಂತರ ಮಾತ್ರ ಇದನ್ನು ಪರಿಶೀಲಿಸಬಹುದು ಎಂದು ಅವರು ಸಮರ್ಥಿಸಿಕೊಂಡರು.





