ಮಂಡ್ಯ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿಯೊಬ್ಬ ಮಂಗಳವಾರ ಬೆಳಿಗ್ಗೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಕೆ.ಆರ್.ಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ(55) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಬೇಸತ್ತಿದ್ದ ಈತ, ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಉದ್ಯಾನದಲ್ಲಿ ಬೆಳ್ಳಂಬೆಳಿಗ್ಗೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.
ಘಟನೆ ನಡೆಯುತ್ತಿದ್ದ ಅಲ್ಲಿ ನೆರೆದಿದ್ದ ಜನರು ನೀರು ಹಾಕಿ ಬೆಂಕಿಯನ್ನು ನಂದಿಸಿದ್ದಾರೆ. ಮೊದಲು ವಿದ್ಯುತ್ ಶಾಕ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಿದ ಮಂಜೇಗೌಡ ನಂತರ ತಾನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದೇನೆ ಎಂದು ಹೇಳಿದ್ದಾನೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಆತನನ್ನು ರಕ್ಷಿಸಿ, ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.





