ಮೈಸೂರು: ಮೈಸೂರು ಭಾಗದಲ್ಲಿ ನಿರಂತರವಾಗಿ ಹುಲಿ ದಾಳಿಯಾಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘಟನೆ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಇಲಾಖೆ ಕಚೇರಿ ಮುಂಭಾಗ ಜಮಾಯಿಸಿದ ರೈತರು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಅರಣ್ಯ ಸಚಿವರ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ರೈತರು, ಮಾನವ-ಕಾಡು ಪ್ರಾಣಿಗಳ ನಡುವಿನ ಸಂಘರ್ಷ ತಡೆಯಬೇಕು. ಅರಣ್ಯ ಇಲಾಖೆ ಇದೇ ರೀತಿ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ರೈತರು ಭಾಗಿಯಾಗಿದ್ದರು.





