ಮಡಿಕೇರಿ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6000 ಸೇರಿದಂತೆ 18,000 ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಕುರಿತು ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಶಾಲೆಯೊಂದರಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಈ ನಿಟ್ಟಿನಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 900 ಕೆಪಿಎಸ್ ಶಾಲೆ ಆರಂಭ ಮಾಡಲು ಮಂಜೂರಾತಿ ನೀಡಲಾಗಿದೆ. ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಲಾಗಿದ್ದು, ಅಗತ್ಯವಿರುವ ಕಡೆ ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಉಚಿತ ವಿದ್ಯುತ್ ನೀಡಲಾಗುತ್ತಿದೆ. ವಿಶೇಷ ತರಗತಿಗಳನ್ನು ನಡೆಸಿ ಫಲಿತಾಂಶ ಹೆಚ್ಚಳಕ್ಕೆ ಗಮನಹರಿಸಲಾಗಿದೆ ಎಂದು ಹೇಳಿದರು.





