ಚೆನ್ನೈ: ದಿತ್ವಾ ಚಂಡಮಾರುತದ ಪರಿಣಾಮ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದ್ದು, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಸೇರಿದಂತೆ 28 ವಿಪತ್ತು ನಿರ್ವಹಣಾ ತಂಡಗಳನ್ನು ಸನ್ನದ್ದಿನಲ್ಲಿಡಲಾಗಿದೆ.
ಶ್ರೀಲಂಕಾ ಸಮೀಪ ಬಂಗಾಳಕೊಲ್ಲಿಯಲ್ಲಿ ಕೇಂದ್ರೀಕೃತವಾಗಿರುವ ದಿತ್ವಾ ಚಂಡಮಾರುತ ಉತ್ತರ ಈಶಾನ್ಯ ದಿಕ್ಕಿನತ್ತ 5 ಕಿ.ಮೀ ವೇಗದಲ್ಲಿ ಚಲಿಸುತ್ತಿದೆ.
ಭೂಭಾಗಕ್ಕೆ ಹತ್ತಿರವಾಗುತ್ತಿದ್ದಂತೆ ವೇಗ ತೀವ್ರಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿ ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಮೂರು ರಾಜ್ಯಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.





