ಮಡಿಕೇರಿ : ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅನಾನುಕೂಲಗಳಾಗುತ್ತಿದೆ ಮತ್ತು ಸಿಬ್ಬಂದಿಗಳು ಸೌಜನ್ಯ ತೋರುತ್ತಿಲ್ಲ ಎನ್ನುವ ಗಂಭೀರ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಶನಿವಾರ ಶಾಸಕರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಸಂಬಂಧಿಸಿದವರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಹಾಗೂ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡಬೇಕೆಂದು ವೈದ್ಯಕೀಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಂತರ ರೋಗಿಗಳೊಂದಿಗೆ ಸಮಾಲೋಚನೆ ನಡೆಸಿ ಸೌಲಭ್ಯಗಳ ಕುರಿತು ಚರ್ಚಿಸಿದರು. ಆಸ್ಪತ್ರೆಯ ಲೋಪದೋಷಗಳನ್ನು ತಕ್ಷಣ ಸರಿಪಡಿಸಿ ಉತ್ತಮ ರೀತಿಯ ಜನಸ್ನೇಹಿ ವಾತಾವರಣವನ್ನು ಸೃಷ್ಟಿಸುವಂತೆ ವೈದ್ಯಾಧಿಕಾರಿಗಳಿಗೆ ಸಲಹೆ ನೀಡಿದರು.





