Mysore
19
broken clouds

Social Media

ಭಾನುವಾರ, 11 ಜನವರಿ 2026
Light
Dark

ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ : ಎಚ್‌ಡಿಕೆ ಲೇವಡಿ

ಬೆಂಗಳೂರು : ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಅಧಿಕಾರವಧಿಯಲ್ಲಿ ದೇವರಾಜ ಅರಸು ಅವರ ದಾಖಲೆ ಮುರಿದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅವರೊಬ್ಬ ಲೀಸ್‌ ಬೇಸ್ಟ್‌ ಮುಖ್ಯಮಂತ್ರಿ, ದೇವರಾಜ ಅರಸು ದಾಖಲೆ ಮುರಿದೆ ಅಂತಾ ಹೇಳ್ತಿದ್ದಾರಲ್ಲಾ. ಹಿಂದೆ ಇಂದಿರಾಗಾಂಧಿ ವಿರುದ್ಧ ಅರಸು ಸೆಡ್ಡು ಹೊಡೆದು ನಿಂತಿದ್ದರು. ನಿರಂತರವಾಗಿ ಅವರು ಅಧಿಕಾರ ನಡೆಸಿದ್ದರು. ಸಿದ್ದರಾಮಯ್ಯ ಅವರು ಈಗ ರಾಹುಲ್ ಗಾಂಧಿ ಯಾವಾಗ ಹೋಗು ಅಂತಾರೆ ಅಂತಾ ಕಾಯುತ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.

ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ
ಜಿ.ರಾಮ್.ಜಿ (G RAM G) ಯೋಜನೆಯ ಬಗ್ಗೆ ಕಾಂಗ್ರೆಸ್ ಪಕ್ಷ ಸುಳ್ಳಿನ ಸಂಕಥನ ಸೃಷ್ಟಿ ಮಾಡುತ್ತಿದ್ದು, ಆ ಸುಳ್ಳನ್ನು ಎದುರಿಸಲು ನಾವು ದಾಖಲೆ ಸಮೇತ ಬಹಿರಂಗ ಚರ್ಚೆಗೆ ತಯಾರಿದ್ದೇವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸವಾಲೊಡ್ಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಪರಿಕಲ್ಪನೆಯಂತೆ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ)’ ಯೋಜನೆ ಬಗ್ಗೆ ಕಾಂಗ್ರೆಸ್ ಹರಡುತ್ತಿರುವ ಸುಳ್ಳುಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಕಾಂಗ್ರೆಸ್ ಸುಳ್ಳುಗಳನ್ನು ಜನರು ನಂಬುವ ಕಾಲ ಹೋಗಿದೆ ಎಂದರು.

ಜಿ ರಾಮ್ ಜಿ ಯೋಜನೆ ಬಗ್ಗೆ ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿದರುಕೇಂದ್ರ ಸಚಿವರು.

ಕಾಂಗ್ರೆಸ್ ಪಕ್ಷವು ದೇಶದಲ್ಲಿ ಸುದೀರ್ಘ ಕಾಲ ಆಡಳಿತ ನಡೆಸಿದೆ. ಯಾವುದಾದರೂ ಪ್ರಮುಖ ಯೋಜನೆಗಳಿಗೆ ಮಹಾತ್ಮ ಗಾಂಧಿ ಅವರ ಹೆಸರನ್ನಿಟ್ಟಿದ್ದಾರೆಯೇ? ಎಲ್ಲಾ ಯೋಜನೆಗಳಿಗೆ ನೆಹರು ಕುಟುಂಬದ ಸದಸ್ಯರ ಹೆಸರುಗಳನ್ನು ಇಟ್ಟು ಗಾಂಧೀಜಿಗೆ ದ್ರೋಹ ಬಗೆದಿದ್ದಾರೆ. ಇವರಿಗೆ ಗಾಂಧೀಜಿ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ನಕಲಿ ಬಿಲ್ ಸೃಷ್ಟಿಸಿ ಲೂಟಿ ಮಾಡಿದ್ದು ಸಾಲದೇ?
ಹೊರಗೆ ಅಪಪ್ರಚಾರ ಮಾಡುತ್ತಿರುವುದು ಸಾಲದು ಎಂಬಂತೆ ವಿಧಾನಸಭೆ ಅಧಿವೇಶನವನ್ನು ಬೇರೆ ಕರೆಯುತ್ತಿದ್ದಾರೆ. ಪಾದಯಾತ್ರೆಯನ್ನು ಕೂಡ ನಡೆಸುತ್ತಾರಂತೆ! ಯಾವ ಪುರುಷಾರ್ಥಕ್ಕೆ ಇದೆಲ್ಲವನ್ನೂ ಮಾಡುತ್ತಾರೆ? ನರೇಗಾ ಹೆಸರಿನಲ್ಲಿ ನಕಲಿ ಬಿಲ್’ಗಳನ್ನು ಸೃಷ್ಟಿಸಿ ಲೂಟಿ ಮಾಡಿದ್ದು ಸಾಲದೇ? ಕಾಂಗ್ರೆಸ್’ನವರಿಂದ ಬಡ ಕೂಲಿ ಕಾರ್ಮಿಕರಿಗೆ ನ್ಯಾಯ ಸಿಕ್ಕುತ್ತದೆಯೇ? ಕಾರ್ಮಿಕರಿಗೆ ನ್ಯಾಯ ಮಾಡದೆ ಇವರು ಏನು ಮಾಡುತ್ತಿದ್ದರು? ನಕಲಿ ಬಿಲ್ಲುಗಳನ್ನು ತಡೆಯಲು, ನಕಲಿ ಕಾರ್ಡುಗಳನ್ನು ಪತ್ತೆ ಹಚ್ಚಲು ಇವರು ವಿಫಲವಾಗಿದ್ದು ಯಾಕೆ? ಎಂದು ಸಚಿವ ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ನರೇಗಾ ಯೋಜನೆ ಸ್ಥಗಿತವಾಗಿಲ್ಲ. ಕಳೆದ ಅನೇಕ ವರ್ಷಗಳಿಂದ ಈ ಯೋಜನೆಯಲ್ಲಿ ನಡೆದಿದ್ದ ಅಕ್ರಮಗಳನ್ನು ನರೇಂದ್ರ ಮೋದಿ ಅವರ ಸರಕಾರ ಸರಿಪಡಿಸಿ ಅದರಲ್ಲಿ ಅನೇಕ ಮಹತ್ವದ ಸುಧಾರಣೆಗಳನ್ನು ತಂದಿದೆ. ಲೋಪಗಳನ್ನು ಸರಿಪಡಿಸಿ ಸುಧಾರಣೆಗಳನ್ನು ಮಾಡುವುದು ತಪ್ಪು ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿರುವುದು ಸರಿಯಲ್ಲ. ಜಿ ರಾಮ್ ಜಿ ಯೋಜನೆಯಿಂದ ಗ್ರಾಮ ಪಂಚಾಯ್ತಿ ಅಧಿಕಾರಕ್ಕೆ ಆಗಲಿ ಅಥವಾ ರಾಜ್ಯ ಸರ್ಕಾರಗಳ ಅಧಿಕಾರಕ್ಕೆ ಯಾವುದೇ ಧಕ್ಕೆ ಆಗಲ್ಲ ಎಂದು ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.

ಈ ಯೋಜನೆಗೆ ಪೂರ್ಣ ಅನುದಾನ ನೀಡುತಿರುವುದು ಕೇಂದ್ರ ಸರ್ಕಾರ. ಕೇಂದ್ರ ನೀಡಿರುವ ಅನುದಾನವನ್ನು ರಾಜ್ಯ ಸರ್ಕಾರ ಸರಿಯಾಗಿ ಬಳಕೆ ಮಾಡುತ್ತಿಲ್ಲ. ಅದರಲ್ಲಿ ಪಾರದರ್ಶಕತೆ ಇಲ್ಲ. ಈ ಯೋಜನೆ ಹೆಸರಲ್ಲಿ ಕಳ್ಳಬಿಲ್ಲುಗಳನ್ನು ಮಾಡಿಕೊಂಡು ಲೂಟಿ ಮಾಡಲಾಗಿದೆ. ಇದು ಶುರು ಆದಾಗಿನಿಂದ ಆಗಿರುವ ಲೋಪಗಳನ್ನು ಸರಿಪಡಿಸಿ ಹೊಸ ಯೋಜನೆ ರೂಪಿಸಲಾಗಿದೆ. ಮನರೇಗಾದಲ್ಲಿ ಇದ್ದ ತಪ್ಪುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ವಿವರಿಸಿದರು.

ಗಾಂಧೀಜಿ ಅವರ ಹೆಸರನ್ನು ಕೇವಲ ಚುನಾವಣೆಗೆ ಮತ್ತು ಮತಕ್ಕಾಗಿ ಕಾಂಗ್ರೆಸ್ ಬಲಕ್ಕೆ ಮಾಡಿಕೊಂಡಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇದೇ ಯೋಜನೆಯ ಬಜೆಟ್ ಅನ್ನು ಕಡಿತಗೊಳಿಸಿತ್ತು. ಕಾರ್ಮಿಕರ ವೇತನವನ್ನು ಸ್ಥಗಿತಗೊಳಿಸಿದ ಇತಿಹಾಸವೂ ಆ ಪಕ್ಷಕ್ಕೆ ಇದೆ. ಈಗ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಪ್ರತಿ ಪೈಸೆಯೂ ನೇರವಾಗಿ ಕಾರ್ಮಿಕರ ಖಾತೆಗೆ ಮುಟ್ಟುತ್ತಿದೆ. ಇದನ್ನು ಸಹಿಸಿಕೊಳ್ಳಲು ಕಾಂಗ್ರೆಸ್ ಗೆ ಸಾಧ್ಯ ಆಗುತ್ತಿಲ್ಲ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಈ ಯೋಜನೆಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚು ಶಕ್ತಿ, ಅಧಿಕಾರ ನೀಡಲಾಗಿದೆ. ಗ್ರಾಮ ಪಂಚಾಯಿತಿಗಳೇ ತಮಗೆ ಬೇಕಾದ ಯೋಜನೆಗಳನ್ನು ರೂಪಿಸಲಿವೆ ಹಾಗೂ ಗ್ರಾಮ ಸಭೆಗಳು ಕೆಲಸದ ಆದ್ಯತೆ ಗುರುತಿಸಿ ಅನುಷ್ಠಾನ, ಮೇಲ್ವಿಚಾರಣೆ ಮತ್ತು ಸಾಮಾಜಿಕ ಲೆಕ್ಕಪರಿಶೋಧನೆಯನ್ನು ಕಡ್ಡಾಯಗೊಳಿಸುವ ಮೂಲಕ ಪಾರದರ್ಶಕತೆ ತರಲಾಗಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಬೇಕಾಗಿಲ್ಲ ಎಂದು ಎಂದು ಕೇಂದ್ರ ಸಚಿವರು ವಾಗ್ದಾಳಿ ನಡೆಸಿದರು.

ಜಿ ರಾಮ್ ಜಿ ಯೋಜನೆಯನ್ನು 60:40% ಅನುಪಾತದಲ್ಲಿ ರೂಪಿಸಲಾಗಿದೆ. ರಾಜ್ಯ ಸರ್ಕಾರ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅಕ್ರಮವಾಗಿ ಹಣ ಪಡೆಯಲಾಗಿದೆ. ರಾಜ್ಯ ಸರ್ಕಾರಕ್ಕೂ ಜವಾಬ್ದಾರಿ ಇರಲಿ ಅಂತ 40% ರಾಜ್ಯದ ಪಾಲು ನಿಗದಿ ಮಾಡಲಾಗಿದೆ. ರಾಜ್ಯ ಸರ್ಕಾರಕ್ಕೂ ಜವಾಬ್ದಾರಿ ಕೊಡಲಾಗಿದೆ, ಎಲ್ಲವನ್ನೂ ಕಿತ್ತುಕೊಂಡಿಲ್ಲ. ಇದನ್ನು ರಾಜ್ಯ ಸರ್ಕಾರ ಅರ್ಥ ಮಾಡಿಕೊಳ್ಳಬೇಕು.

Tags:
error: Content is protected !!