ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನವನ್ನು ಜನವರಿ.22ರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ಸಮಾವೇಶಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.
ಬುಧವಾರ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಜಂಟಿ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಮನವಿ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ಇದರ ಬೆನ್ನಲ್ಲೇ ಅಧಿವೇಶನ ಕರೆದು ರಾಜ್ಯಪಾಲರು ಸೂಚನೆ ಹೊರಡಿಸಿದ್ದಾರೆ.
ಜನವರಿ.22ರಿಂದ 31ರವರೆಗೆ ಅಧಿವೇಶನದಲ್ಲಿ ನಡೆಯಲಿರುವ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿಯನ್ನು ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಿಸಿದ್ದಾರೆ.




