Mysore
21
clear sky

Social Media

ಬುಧವಾರ, 21 ಜನವರಿ 2026
Light
Dark

ಚಾಮುಂಡಿಬೆಟ್ಟದ ಪಾರಂಪರಿಕತೆಗೆ ಧಕ್ಕೆಯಾಗದಂತೆ ಅಭಿವೃದ್ಧಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಸಾದ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚಾಮುಂಡಿ ಬೆಟ್ಟದಲ್ಲಿ ಪರಿಸರಕ್ಕೆ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುತ್ತಿದೆ. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಚಾಮುಂಡಿ ಬೆಟ್ಟದಲ್ಲಿ ವಾಸಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಆದ್ದರಿಂದಲೇ ಇಂದು ಚಾಮುಂಡಿ ಬೆಟ್ಟದ ನಿವಾಸಿಗಳ ಅಹವಾಲುಗಳನ್ನು ಹಾಗೂ ಅನಿಸಿಕೆಗಳನ್ನು ಸ್ವೀಕರಿಸಲಾಗುತ್ತಿದೆ. ನಿವಾಸಿಗಳ ಸಲಹೆಗಳನ್ನು ಪಡೆದು ಅದರಂತೆ ಯೋಜನೆ ರೂಪಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಮಾತನಾಡಿ, ಪ್ರಸಾದ್ ಯೋಜನೆಯಡಿ 45.70 ಕೋಟಿ ಅನುದಾನ ಮಂಜೂರು ಆಗಿರುತ್ತದೆ. ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಲು ಸರತಿ ಸಾಲಿಗೆ ಕಲ್ಲಿನ ಕ್ಯೂ ಮಂಟಪ ಮಾಡಲಾಗುತ್ತಿದೆ. ಮಹಾಬಲೇಶ್ವರ ದೇವಸ್ಥಾನದ ಪಕ್ಕದಲ್ಲಿ ಕ್ಯೂ ಬಂದು ದೇವಸ್ಥಾನದ ಮುಂಭಾಗದಲ್ಲಿ ಬಂದು ಸೇರುತ್ತದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್, ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!