Mysore
27
overcast clouds

Social Media

ಗುರುವಾರ, 25 ಜೂನ್ 2026
Light
Dark

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ

ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ಮೇಲೆ ಏಕಾಏಕಿ ಕಾಡಾನೆಯೊಂದು ದಾಳಿಗೆ ಮುಂದಾದ ಪರಿಣಾಮ ಕಾರ್ಮಿಕರು ಭಯಭೀತರಾಗಿ ಪ್ರಾಣ ಉಳಿಸಿಕೊಳ್ಳಲು ಎದ್ದುಬಿದ್ದು ಓಡಿದ್ದಾರೆ.

ಈ ವೇಳೆ ಮಹಿಳೆಯೊಬ್ಬರು ತಪ್ಪಿಸಿಕೊಳ್ಳುವ ಸಂದರ್ಭ ಕೆಳಗೆ ಬಿದ್ದು ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಗಾಯಗಳಾಗಿದ್ದರೂ ಮಹಿಳೆ ಪ್ರಾಣಾಪಾಯದಿಂದ ಪಾರಾಗಿರುವುದು ಸಮಾಧಾನದ ಸಂಗತಿಯಾಗಿದೆ.

ಇತ್ತೀಚಿನ ದಿನಗಳಲ್ಲಿ ಪಳ್ಳಕೆರೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕಾಫಿ ತೋಟಗಳು ಮತ್ತು ಜನವಸತಿ ಪ್ರದೇಶಗಳಲ್ಲಿಯೇ ಆನೆಗಳು ಬೀಡುಬಿಟ್ಟಿರುವುದರಿಂದ ಗ್ರಾಮಸ್ಥರು ಆತಂಕದಲ್ಲಿ ದಿನ ಕಳೆಯುವಂತಾಗಿದೆ. ಕಾರ್ಮಿಕರು ತೋಟದ ಕೆಲಸಕ್ಕೆ ತೆರಳಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ಥಳೀಯರ ಪ್ರಕಾರ, ಕಳೆದ ಕೆಲವು ವಾರಗಳಿಂದ ಕಾಡಾನೆಗಳು ನಿರಂತರವಾಗಿ ಗ್ರಾಮ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದು, ಬೆಳೆ ನಾಶಪಡಿಸುವುದರ ಜೊತೆಗೆ ಜನರ ಜೀವಕ್ಕೂ ಅಪಾಯ ಉಂಟುಮಾಡುತ್ತಿವೆ. ಅರಣ್ಯ ಇಲಾಖೆ ಈ ಹಿಂದೆ ಕೆಲವು ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸಿದ್ದರೂ, ಮತ್ತೆ ಆನೆಗಳು ಗ್ರಾಮ ವ್ಯಾಪ್ತಿಗೆ ಮರಳಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ಘಟನೆಯ ಬಳಿಕ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಗ್ರಾಮದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ತಕ್ಷಣ ಕಾಡಿಗೆ ಹಟ್ಟುವಂತೆ ಒತ್ತಾಯಿಸಿದ್ದಾರೆ. ಯಾವುದೇ ಅನಾಹುತ ಸಂಭವಿಸುವ ಮುನ್ನ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಡಾನೆಗಳನ್ನು ಕಾಡಿಗೆ ಹಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಆದರೆ ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತ್ವರಿತ ಕಾರ್ಯಾಚರಣೆ ನಡೆಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Tags:
error: Content is protected !!