ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
2011ರಿಂದ ಈವರೆಗೆ ಸುಮಾರು 16 ವರ್ಷಗಳ ಅವಧಿಯಲ್ಲಿ 3,200ಕ್ಕೂ ಹೆಚ್ಚು ಕಳ್ಳಬೇಟೆ ಪ್ರಕರಣಗಳು ನಡೆದಿರುವ ಮಾಹಿತಿಯನ್ನು ಅರಣ್ಯ ಇಲಾಖೆ ಸಂಗ್ರಹಿಸಿದೆ. ಇದು ಕಾಡು ಹಾಗೂ ವನ್ಯಜೀವಿಗಳ ರಕ್ಷಣೆಗೆ ಸವಾಲಿನ ಸನ್ನಿವೇಶವಾಗಿದೆ ಎಂದು ಇಲಾಖೆ ಪರಿಗಣಿಸಿದೆ.
ಹನೂರು ಹಾಗೂ ಸುತ್ತಮುತ್ತಲಿನ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಕಳ್ಳಬೇಟೆ ನಡೆಸುವ ದೊಡ್ಡ ಜಾಲವೇ ಕಾರ್ಯನಿರ್ವಹಿಸುತ್ತಿದೆ ಎನ್ನಲಾಗಿದ್ದು, ವಿವಿಧ ಪ್ರಾಣಿಗಳ ಮಾಂಸವನ್ನು ಬೇಡಿಕೆಯಂತೆ ಪೂರೈಸುವ ವ್ಯವಸ್ಥೆಯನ್ನು ಈ ಗುಂಪು ಮಾಡಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಿಂದ ಕರೆ ಮಾಡಿ ಬೇಕಾದ ಮಾಂಸವನ್ನು ಪಡೆದುಕೊಳ್ಳುವ ವ್ಯವಸ್ಥೆ ನಿರಂತರವಾಗಿ ನಡೆಯುತ್ತಿದೆ ಎನ್ನಲಾಗಿದೆ.
ಕಳ್ಳಬೇಟೆಗಾರರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾದಾಗ ಪ್ರತಿಭಟನೆ ಹಾಗೂ ಮಾನವ ಹಕ್ಕುಗಳ ನೆಪದಲ್ಲಿ ಅಧಿಕಾರಿಗಳ ವಿರುದ್ಧ ಆರೋಪಗಳನ್ನು ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ. ಕೆಲ ಅರಣ್ಯ ಇಲಾಖೆ ಅಧಿಕಾರಿಗಳು ಕಳ್ಳಬೇಟೆಗಾರರಿಗೆ ಸಹಕರಿಸುತ್ತಿದ್ದಾರೆ ಎಂಬ ಆರೋಪವೂ ಇದೆ.
ಈ ಹಿನ್ನೆಲೆಯಲ್ಲಿ ಕಳ್ಳಬೇಟೆಗೆ ಕಡಿವಾಣ ಹಾಕಲು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಮುಂದಾಗಿದ್ದಾರೆ. ಈಗಾಗಲೇ 3,000ಕ್ಕೂ ಹೆಚ್ಚು ಕಳ್ಳಬೇಟೆ ಪ್ರಕರಣಗಳ ಮಾಹಿತಿಯನ್ನು ಸಂಗ್ರಹಿಸಿರುವ ಅರಣ್ಯ ಇಲಾಖೆ, ಕಳ್ಳಬೇಟೆಗಾರರ ವಿರುದ್ಧ ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪ್ರಯತ್ನಿಸಲಾಗುತ್ತಿದೆ.
ಇನ್ನೊಂದೆಡೆ, ಆಲೂರು ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಮ್ಯಾಜಿಸ್ಟ್ರೇಟ್ ತನಿಖೆಯ ವರದಿ ಇನ್ನೆರಡು ದಿನಗಳಲ್ಲಿ ಸರ್ಕಾರದ ಕೈ ಸೇರುವ ಸಾಧ್ಯತೆ ಇದೆ. ಇದೇ ವೇಳೆ ರಾಜ್ಯ ಮಾನವ ಹಕ್ಕುಗಳ ಆಯೋಗವೂ ಪ್ರಕರಣದ ಕುರಿತು ತನಿಖೆ ಆರಂಭಿಸಿದೆ.




