ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶನಿವಾರ ಕುಟುಂಬ ಸಮೇತ ಭೇಟಿ ನೀಡಿ ಶ್ರೀ ಮಹದೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಸಚಿವರು ಬೆಟ್ಟಕ್ಕೆ ಆಗಮಿಸುತ್ತಿದ್ದಂತೆ ಪ್ರಾಧಿಕಾರದ ವತಿಯಿಂದ ವಾದ್ಯ ಮೇಳಗಳೊಂದಿಗೆ ಅದ್ಧೂರಿಯಾಗಿ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು.
ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪುರುಷೋತ್ತಮ್ ಅವರು ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸನ್ಮಾನಿಸಿದರು.
ನಂತರ ಸಚಿವ ವಿ. ಸೋಮಣ್ಣ ಅವರು ಕುಟುಂಬದ ಸದಸ್ಯರೊಂದಿಗೆ ಶ್ರೀ ಕ್ಷೇತ್ರದ ಗರ್ಭಗುಡಿಗೆ ತೆರಳಿ ಶ್ರೀ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ರಾಜ್ಯದ ಜನತೆಯ ಸುಖ-ಶಾಂತಿ, ಸಮೃದ್ಧಿಗಾಗಿ ಪ್ರಾರ್ಥಿಸಿದರು. ದೇವಸ್ಥಾನದ ಆಗಮಿಸರು ಪ್ರಾಧಿಕಾರದ ವತಿಯಿಂದ ಸನ್ಮಾನಿಸಿ ಫಲ ತಾಂಬೂಲ, ತೀರ್ಥ ಪ್ರಸಾದ ನೀಡಿ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದತ್ತೇಶ್ ಕುಮಾರ್, ಬಿಜೆಪಿ ಮುಖಂಡ ನಿಶಾಂತ್, ಮಲೆ ಮಹದೇಶ್ವರ ಮಂಡಲ ಅಧ್ಯಕ್ಷ ಮುರುಗೇಶ್, ಅಖಿಲ ಭಾರತ ವೀರಶೈವ ಸಮಾಜದ ಮುಖಂಡ ತಿಮ್ಮರಾಜಿಪುರ ಪುಟ್ಟಣ್ಣ ಡಿವೈಎಸ್ಪಿ ಮೋಹನ್,ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.




