ಮಂಡ್ಯ : ತೆಂಗಿನ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣ ಬಾದಿತ ಪ್ರದೇಶಗಳಲ್ಲಿ ವೈಜ್ಞಾನಿಕ ಸಮೀಕ್ಷೆಯನ್ನು ತೋಟಗಾರಿಕೆ ಇಲಾಖೆ ವತಿಯಿಂದ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.
ಸೋಮವಾರ ಜಿಲ್ಲಾಧಿಕಾರಿಗಳು ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ ತೆಂಗಿನ ಬೆಳೆಯು ಪ್ರಮುಖವಾಗಿದ್ದು, ಜಿಲ್ಲೆಯಲ್ಲಿ ಒಟ್ಟು 74731 ಹೆಕ್ಟೇರ್ ವಿಸ್ತೀರ್ಣ ಬೆಳೆಯನ್ನು ಬೆಳೆಯಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಮದ್ದೂರು, ಕೆ.ಆರ್.ಪೇಟೆ ಹಾಗೂ ನಾಗಮಂಗಲ ತಾಲ್ಲೂಕುಗಳಲ್ಲಿ ತೆಂಗಿನ ಬೆಳೆ ಹೆಚ್ಚಾಗಿ ಬೆಳೆಯಲಾಗುತ್ತದೆ. ತೆಂಗಿನ ಬೆಳೆಯಲ್ಲಿ ಬೇಸಿಗೆ ಸಮಯದಲ್ಲಿ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣ ಬಾಧೆಯು ಹೆಚ್ಚು ಕಂಡುಬರುತ್ತದೆ ಹಾಗೂ ಮದ್ದೂರು ತಾಲ್ಲೂಕು ಭಾಗದಲ್ಲಿ ಸದರಿ ರೋಗ ಹೆಚ್ಚಾಗಿ ಕಂಡುಬರುತ್ತಿದೆ ಎಂದರು.
ಕಪ್ಪು ತಲೆ ಹುಳು ಹಾಗೂ ಬಿಳಿ ನೊಣ ಬಾಧೆಯ ಬಗ್ಗೆ 1428 ಗ್ರಾಮಗಳಲ್ಲಿ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. 301822 ತೆಂಗಿನ ತಾಕುಗಗಳನ್ನು ಸಮೀಕ್ಷೆ 200 ಸಮೀಕ್ಷೆದಾರರನ್ನು ನಿಯೋಜಿಸಿ ಅವರಿಗೆ ತರಬೇತಿ ನೀಡಲಾಗಿದೆ. ಸಮೀಕ್ಷೆದಾರರು ಆಗಮಿಸಿದ ಸಂದರ್ಭದಲ್ಲಿ ರೈತರು ನಿಖರ ಮಾಹಿತಿ ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು.
ಕಪ್ಪು ತಲೆ ಹುಳು ಹಾಗೂ ಬಿಳಿ ನೊಣ ಬಾಧೆಯ ರೋಗ ತಡೆಗಟ್ಟಲು ತೋಟಗಾರಿಕೆ ಇಲಾಖೆ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಅರಿವು ಮೂಡಿಸಿ ಎಂದರು.
ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರೀ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಎಸ್.ಹೆಚ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.





