513 ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಭೇರ್ಯ ಮಹೇಶ್
ಕೆ.ಆರ್.ನಗರ: ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಡೊಯ್ಯಲು ಕ್ಷೇತ್ರದಲ್ಲಿ ಸುಮಾರು ೫೧೩ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೇ ೨೩ರ ಶುಕ್ರವಾರ ಬೆಳಿಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಸೇರಿದಂತೆ ಸಚಿವ ಸಂಪುಟದ ಸಚಿವರು, ಶಾಸಕರು, ಸಂಸದರು ಚಾಲನೆ ನೀಡುವರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕೆ. ಆರ್. ನಗರಕ್ಕೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಆಗಮಿಸುತ್ತಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಕೆ. ಆರ್. ನಗರ ಮತ್ತು ಸಾಲಿಗ್ರಾಮ ಆವಳಿ ತಾಲ್ಲೂಕುಗಳಿಗೆ ಹೊಸ ಯೋಜನೆಗಳು, ಅನುದಾನಗಳು ಭಾರೀ ಪ್ರಮಾಣದಲ್ಲಿ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಜನಸಾಮಾನ್ಯರಲ್ಲಿ ಹಲವು ನಿರೀಕ್ಷೆಗಳನ್ನು ಮೂಡಿಸಿದೆ. ಕೆ. ಆರ್. ನಗರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಹೊಸ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು.
ಇತ್ತೀಚೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಕಾವೇರಿ ನದಿಯಿಂದ ಏತನೀರಾವರಿ ಯೋಜನೆ ಮೂಲಕ ಕೆಸ್ತೂರು ಕೊಪ್ಪಲು, ಹೆಬ್ಬಾಳು, ಮಾವತ್ತೂರು, ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲು ೬೦ ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಲಾಗಿದೆ. ಕಪ್ಪಡಿ ಮತ್ತು ಗಂಧನಹಳ್ಳಿ ಸಂಪರ್ಕ ಕಲ್ಪಿಸುವ ಸೇತುವೆಗೆ ೨೫ ಕೋಟಿ ರೂ., ಮಿರ್ಲೆ ಮತ್ತು ಹೊಸಅಗ್ರಹಾರ ಹೋಬಳಿ ವ್ಯಾಪ್ತಿಯ ಕೆರೆ-ಕಟ್ಟೆ ಗಳಿಗೆ ಏತ ನೀರಾವರಿ ಮೂಲಕ ನೀರು ತುಂಬಿಸಲು ೫೦ ಕೋಟಿ ರೂ. ವೆಚ್ಚದ ಕಾಮಗಾರಿಗೆ ಸಚಿವ ಸಂಪುಟ ಒಪ್ಪಿಗೆ ನೀಡಲಾಗಿ ಅನುದಾನ ಬಿಡುಗಡೆಯಾಗಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸಚಿವರಿಗೆ ಕ್ಷೇತ್ರದ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಹಾಗೂ ಬ್ಲಾಕ್ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ.
ಶಾಸಕ ಡಿ. ರವಿಶಂಕರ್ ಅವರು ವಿಧಾನಸಭೆ ಅಧಿವೇಶನದಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ, ಸಾಲಿಗ್ರಾಮ ತಾಲ್ಲೂಕಿನ ಅಭಿವೃದ್ಧಿಗಾಗಿ ಅನುದಾನ ಗಳ ಬಗ್ಗೆ ಪ್ರಸ್ತಾಪಿಸುತ್ತಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಗಮನಹರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಹೆಚ್. ಎ. ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಕೆ. ಆರ್. ನಗರ ಪಟ್ಟಣದ ಕೃಷ್ಣರಾಜ ಸ್ಟೇಡಿಯಂನ ಹೆಲಿಪ್ಯಾಡ್‌ನಲ್ಲಿ ಬಂದು ಇಳಿಯಲಿದ್ದಾರೆ.
ಬಳಿಕ ರೇಡಿಯೋ ಮೈದಾನದಲ್ಲಿ ನಡೆಯುವ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಜಗಮಗಿಸುತ್ತಿರುವ ಪಟ್ಟಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆ. ಆರ್. ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ವಿವಿಧ ರಸ್ತೆಗಳು, ಹಾಸನ- ಮೈಸೂರು ಹೆದ್ದಾರಿ, ಗರುಡಗಂಭ ವೃತ್ತ, ಪುರಸಭೆ ವೃತ್ತ, ಬಜಾರ್ ರಸ್ತೆಗಳು -ಕ್ಸ್, ಬ್ಯಾನರ್ ಗಳಿಂದ ರಾರಾಜಿಸುತ್ತಿವೆ.





