Andolana originals

ದಸರಾ ಸಂಭ್ರಮ ಶುರು

ಕೆ.ಬಿ.ರಮೇಶನಾಯಕ

ಇಂದು ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ 

ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ

ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ 

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಮದುವಣಿಗಿತ್ತಿಯಂತೆ ಸಜ್ಜಾಗಿದೆ. ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿದೇವಿಗೆ ಪೂಜೆ ಸಲ್ಲಿಸುವುದರೊಂದಿಗೆ ಹನ್ನೊಂದು ದಿನಗಳ ಕಾಲ ನಡೆಯಲಿರುವ ದಸರಾ ಮಹೋತ್ಸವ ಗರಿಗೆದರಲಿದೆ.

ಶರಣ ಪರಂಪರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಅವರು ಬೆ.೧೧.೫೦ರಿಂದ ಮ.೧೨.೧೩ರೊಳಗೆ ಸಲ್ಲುವ ಧನುರ್ ಲಗ್ನದಲ್ಲಿ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ.

ಕೊಪ್ಪಳದಿಂದ ಆಗಮಿಸಿ ನಂಜನಗೂಡು ತಾಲ್ಲೂಕಿನ ಸುತ್ತೂರು ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿರುವ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಅವರನ್ನು ಭಾನುವಾರ ಬೆಳಿಗ್ಗೆ ಚಾಮುಂಡಿಬೆಟ್ಟದಲ್ಲಿ ಮಹಿಷಾಸುರ ಪ್ರತಿಮೆ ಬಳಿ ನಂದಿಧ್ವಜ, ಮಂಗಳವಾದ್ಯ, ವೀರಗಾಸೆ, ತಮಟೆ, ನಗಾರಿ ಮೇಳ ಮುಂತಾದ ಜಾನಪದ ಕಲಾ ತಂಡಗಳ ಮೆರವಣಿಗೆಯ ಮೂಲಕ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗುತ್ತದೆ.

ನಂತರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶ್ರೀಗಳಿಗೆ ಪೂರ್ಣಕುಂಭ ಸ್ವಾಗತ ನೀಡಲಿದ್ದು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಎಚ್.ಡಿ.ಕುಮಾರಸ್ವಾಮಿ, ಪ್ರಲ್ಹಾದ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರ ಹಾಜರಿಯಲ್ಲಿ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆ ನಡೆಯಲಿದೆ.

ವಿಶೇಷ ಪೂಜೆ ನಂತರ ಪಕ್ಕದಲ್ಲೇ ನಿರ್ಮಿಸಿರುವ ವೇದಿಕೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಉಪಸ್ಥಿತಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ ಅವರು ಉತ್ಸವ ಮೂರ್ತಿಗೆ ಪುಷ್ಪಾರ್ಚನೆಗೈಯ್ಯುವುದರ ಮೂಲಕ ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ.

ಚಾಮುಂಡಿಬೆಟ್ಟದಲ್ಲಿ ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ ಸಿಗುತ್ತಿದ್ದಂತೆ, ಇತ್ತ ದಸರಾ ಮಹೋತ್ಸವ ಇತರೆ ಕಾರ್ಯಕ್ರಮಗಳು ಸಡಗರ, ಸಂಭ್ರಮದಿಂದ ಪ್ರಾರಂಭವಾಗಲಿದೆ.

ಮೊದಲ ದಿನದಂದು ಏನೇನು ಪ್ರಾರಂಭ?: ಫಲಪುಷ್ಪ ಪ್ರದರ್ಶನ, ಪುಷ್ಪಮೇಳ ಮತ್ತು ಸಸ್ಯತೋಟ, ಆಹಾರ ಮೇಳ, ದಸರಾ ಕುಸ್ತಿ ಪಂದ್ಯಾವಳಿ, ಕನ್ನಡ ಪುಸ್ತಕ ಮಾರಾಟ ಮೇಳ, ಲಲಿತಕಲೆ ಮತ್ತು ಕರಕುಶಲ ಶಿಬಿರ, ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ, ವಸ್ತು ಪ್ರದರ್ಶನ, ನೃತ್ಯರೂಪಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ.

ಅರಮನೆ ಆವರಣದಲ್ಲಿ ಭಾನುವಾರ ಸಂಜೆ ೬ಕ್ಕೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿರುವ ಡಿ.ಕೆ.ಶಿವಕುಮಾರ್ ಅವರು, ಹಿರಿಯ ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಶಾಸಕ ಟಿ.ಎಸ್.ಶ್ರೀವತ್ಸ ಅಧ್ಯಕ್ಷತೆ ವಹಿಸಲಿದ್ದು, ವಿಧಾನಸಭಾಧ್ಯಕ್ಷ ಜಿ.ಎಸ್.ಪಾಟೀಲ್, ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಇನ್ನಿತರರು ಅತಿಥಿಗಳಾಗಿ ಆಗಮಿಸಲಿದ್ದಾರೆ.

ಅರಮನೆಯಲ್ಲಿ ಖಾಸಗಿ ದರ್ಬಾರ್:  ಅರಮನೆಯಲ್ಲಿ ಭಾನುವಾರದಿಂದ ವಿಜಯದಶಮಿ ಜಂಬೂ ಸವಾರಿ ತನಕ ರಾಜಮನೆತನದವರು ಶರನ್ನವರಾತ್ರಿ ಆಚರಿಸಲಿದ್ದಾರೆ. ಬೆಳಿಗ್ಗೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳುಆರಂಭಗೊಳ್ಳಲಿವೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರತ್ನಖಚಿತ ಸಿಂಹಾಸನದಲ್ಲಿ ಕುಳಿತು ೧೨ನೇ ವರ್ಷದ ಖಾಸಗಿ ದರ್ಬಾರ್ ನಡೆಸಲಿದ್ದಾರೆ.

೧೧ ದಿನಗಳ ಸಂಭ್ರಮ:  ನವರಾತ್ರಿ ಹಿನ್ನೆಲೆಯಲ್ಲಿ ಅರಮನೆ, ರಾಜ ಮಾರ್ಗ ಸೇರಿ ಇಡೀ ಮೈಸೂರು ನಗರ ವಿದ್ಯುತ್ ದೀಪಾಲಂಕಾರದಿಂದ ಜಗಜಗಿಸುತ್ತಿದ್ದು, ಪ್ರವಾಸಿಗರು, ಜನಸಾಮಾನ್ಯರು ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಲಿದ್ದಾರೆ. ದಸರಾ ಹಿನ್ನೆಲೆಯಲ್ಲಿ ೬,೫೦೦ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಸಿಎಂ ಡಿಕೆಶಿಗೆ ಮೊದಲನೇ ದಸರಾ:

ಮೈಸೂರು: ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಇದು ಮೊದಲನೇ ದಸರಾ ವಾಗಿದೆ. ದೇವರ ಬಗ್ಗೆ ಅಪಾರ ಭಕ್ತಿಯನ್ನುಹೊಂದಿರುವ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತ ಚಾಮುಂಡಿಬೆಟ್ಟದಲ್ಲಿ ಪೂಜೆ ಸಲ್ಲಿಸುವ ಸಾಧ್ಯತೆ ಇದೆ. ಈತನಕ ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ ಭಾಗವಹಿಸುತ್ತಿದ್ದ ಡಿ.ಕೆ. ಶಿವಕುಮಾರ್ ತಮ್ಮ ಹಲವಾರು ವರ್ಷಗಳ ಕನಸು ಈಡೇರಿದ ನಂತರ ಮೊದಲ ದಸರಾ ಮಹೋತ್ಸವದ ಉದ್ಘಾಟನೆಯಲ್ಲಿ ಭಾಗಿಯಾಗುತ್ತಿದ್ದಾರೆ. ಡಾ.ಯತೀಂದ್ರ ಅವರಿಗೂ ಸಚಿವರಾಗಿ ಇದು ಮೊದಲ ದಸರಾವಾಗಿದೆ.

 

 

 

 

ಆಂದೋಲನ ಡೆಸ್ಕ್

Recent Posts

ಇಂದಿನಿಂದ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವ ಆರಂಭ

ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…

18 mins ago

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

18 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

19 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

19 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

20 hours ago