Andolana originals

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ

ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ ಮಳೆ ಪ್ರಮಾಣ ಕಡಿಮೆಯಾಗಿದ್ದು, ಜನವರಿಯಿಂದ ಇದುವರೆಗೆ ಶೇ.೩೭ರಷ್ಟು ಮಳೆ ಕೊರತೆ ದಾಖಲಾಗಿದೆ. ಆದಾಗ್ಯೂ ಆಗಸ್ಟ್ ತಿಂಗಳಲ್ಲಿ ಉತ್ತಮ ಮಳೆಯಾಗಿರುವುದು ಕೃಷಿಕರಿಗೆ ಕೊಂಚ ನೆಮ್ಮದಿ ತಂದಿದ್ದು, ಮಳೆ ಕೊರತೆಯಿಂದ ಈ ಬಾರಿ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಹಾನಿಯಾಗುವ ಸಾಧ್ಯತೆ ಇಲ್ಲ ಎಂದು ಕೃಷಿ ಇಲಾಖೆ ಸ್ಪಷ್ಟಪಡಿಸಿದೆ.

ಜನವರಿಯಿಂದ ಆಗಸ್ಟ್‌ವರೆಗೆ ಕೊಡಗು ಜಿಲ್ಲೆಯಲ್ಲಿ ಸುಮಾರು ೨,೧೧೦ ಮಿ.ಮೀ. ಮಳೆಯಾಗಬೇಕಿತ್ತು. ಆದರೆ ಇದುವರೆಗೆ ೧,೩೨೬ ಮಿ.ಮೀ. ಮಾತ್ರ ಮಳೆಯಾಗಿದೆ. ಇದರಿಂದ ಒಟ್ಟಾರೆ ಶೇ.೩೭ರಷ್ಟು ಮಳೆ ಕೊರತೆ ಉಂಟಾಗಿದೆ. ಜೂನ್‌ನಿಂದ ಆಗಸ್ಟ್‌ವರೆಗೆ ಕೃಷಿಗೆ ಅತ್ಯಂತ ನಿರ್ಣಾಯಕ ಅವಧಿಯಾಗಿದ್ದು, ಈ ಮೂರು ತಿಂಗಳಲ್ಲಿ ೧,೮೫೭ ಮಿ.ಮೀ. ಮಳೆಯಾಗಬೇಕಾಗಿತ್ತು. ಆದರೆ ೧,೧೯೦ ಮಿ.ಮೀ. ಮಾತ್ರ ಮಳೆಯಾಗಿದೆ. ಈ ಅವಧಿಯಲ್ಲಿ ಶೇ.೩೬ರಷ್ಟು ಮಳೆ ಕೊರತೆ ದಾಖಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಶೇ.೩೨ರಷ್ಟು ಕೊರತೆ ದಾಖಲಾಗಿತ್ತು.

ಮಳೆಯ ಪ್ರಮಾಣ ವಾಡಿಕೆಗಿಂತ ಕಡಿಮೆಯಿದ್ದರೂ ಆಗಸ್ಟ್ ತಿಂಗಳಲ್ಲಿ ಉತ್ತಮ ಮಳೆಯಾಗಿದ್ದು, ಈ ತಿಂಗಳಲ್ಲಿ ಮಳೆ ಕೊರತೆ ಶೇ.೧೫ಕ್ಕೆ ಇಳಿದಿದೆ. ಮಳೆಯ ಪ್ರಮಾಣದ ಸಾಮಾನ್ಯ ಮಿತಿಯನ್ನು -೧೯ರಿಂದ +೧೯ರ ನಡುವಿನ ವ್ಯಾಪ್ತಿಯಲ್ಲಿ ಪರಿಗಣಿಸಲಾಗುತ್ತದೆ. ಈ ಮಿತಿಗಿಂತ ಕಡಿಮೆಯಾದರೆ ಅದನ್ನು ನೆಗೆಟಿವ್ ನಾರ್ಮಲ್ ಎಂದು ಕರೆಯಲಾಗುತ್ತದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಮಳೆ ಕೊರತೆಯ ನಡುವೆಯೂ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ನಿರೀಕ್ಷಿತ ಮಟ್ಟದಲ್ಲಿ ಮುಂದುವರಿದಿವೆ. ಮಳೆಯಾಶ್ರಿತ ಭತ್ತ, ನೀರಾವರಿ ಭತ್ತ, ಮುಸುಕಿನ ಜೋಳ ಸೇರಿದಂತೆ ವಿವಿಧ ಬೆಳೆಗಳಿಗಾಗಿ ಒಟ್ಟು ೧೯,೩೭೫ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ನಿಗದಿಪಡಿಸಲಾಗಿತ್ತು. ಈ ಪೈಕಿ ಈಗಾಗಲೇ ೧೧,೭೮೯ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಪೂರ್ಣಗೊಂಡಿದ್ದು, ಶೇ.೬೧ರಷ್ಟು ಗುರಿ ಸಾಧನೆ ಮಾಡಲಾಗಿದೆ. ಭತ್ತದ ಬಿತ್ತನೆ ಕಾರ್ಯವೂ ಉತ್ತಮ ಪ್ರಗತಿ ಸಾಧಿಸಿದ್ದು, ಈಗಾಗಲೇ ಸುಮಾರು ಶೇ.೬೦ರಷ್ಟು ಭತ್ತ ಬಿತ್ತನೆಯಾಗಿದೆ.

ಮುಸುಕಿನ ಜೋಳದ ಬಿತ್ತನೆ ಕಾರ್ಯದಲ್ಲಿ ಮತ್ತಷ್ಟು ಪ್ರಗತಿ ಕಂಡುಬಂದಿದ್ದು, ಸುಮಾರು ಶೇ.೮೬ರಷ್ಟು ಬಿತ್ತನೆ ಪೂರ್ಣಗೊಂಡಿದೆ. ಇತರ ಬೆಳೆಗಳ ಬಿತ್ತನೆಯೂ ನಡೆಯುತ್ತಿದ್ದು, ಬಾಕಿ ಉಳಿದಿರುವ ಬಿತ್ತನೆ ಕಾರ್ಯವನ್ನು ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳ ಮೊದಲ ವಾರದೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಮಳೆ ಕೊರತೆಯ ನಡುವೆಯೂ ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಉಂಟಾಗಿಲ್ಲ. ಪ್ರಸ್ತುತ ಸುಮಾರು ೩೩ ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ. ಏಪ್ರಿಲ್‌ನಿಂದ ಸೆಪ್ಟೆಂಬರ್ ವರೆಗೆ ಜಿಲ್ಲೆಗೆ ಸುಮಾರು ೯೮ ಸಾವಿರ ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆ ಇದ್ದು, ಈಗಾಗಲೇ ಸುಮಾರು ೧.೦೧ ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜಾಗಿದೆ. ಈ ಪೈಕಿ ಸುಮಾರು ೬೮ ಸಾವಿರ ಮೆಟ್ರಿಕ್ ಟನ್ ರಸಗೊಬ್ಬರವನ್ನು ರೈತರಿಗೆ ವಿತರಿಸಲಾಗಿದೆ. ಏಪ್ರಿಲ್ ತಿಂಗಳಲ್ಲಿಯೇ ಸಾಕಷ್ಟು ಪ್ರಮಾಣದಲ್ಲಿ ರಸಗೊಬ್ಬರ ದಾಸ್ತಾನು ಮಾಡಿದ್ದರಿಂದ ನಂತರದ ಅವಧಿಯಲ್ಲಿ ಯಾವುದೇ ಕೊರತೆ ಎದುರಾಗಿಲ್ಲ ಎಂದು ಕೃಷಿ ಇಲಾಖೆ ತಿಳಿಸಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮಳೆ ಪ್ರಮಾಣದಲ್ಲಿ ಹೆಚ್ಚಿನ ವ್ಯತ್ಯಾಸ ಕಂಡುಬಂದಿಲ್ಲ. ಪ್ರಸ್ತುತ ಮಳೆ ಕೊರತೆಯಿದ್ದರೂ ಕೃಷಿ ಚಟುವಟಿಕೆಗಳಿಗೆ ಗಂಭೀರ ಸಮಸ್ಯೆ ಉಂಟಾಗಿಲ್ಲ. ಈಗಾಗಲೇ ಭತ್ತ ಸೇರಿದಂತೆ ಪ್ರಮುಖ ಬೆಳೆಗಳ ಬಿತ್ತನೆ ಕಾರ್ಯ ಉತ್ತಮ ಪ್ರಮಾಣದಲ್ಲಿ ನಡೆದಿರುವುದರಿಂದ ಉಳಿದ ಬಿತ್ತನೆ ಕಾರ್ಯವೂ ಪೂರ್ಣಗೊಳ್ಳಲಿದೆ ಎಂದು ಕೃಷಿ ಇಲಾಖೆ ವಿಶ್ವಾಸ ವ್ಯಕ್ತಪಡಿಸಿದೆ.

ಮಳೆ ಮುಂದಿನ ದಿನಗಳಲ್ಲೂ ಇದೇ ರೀತಿ ಮುಂದುವರಿ ದರೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಅತಿಯಾದ ಮಳೆಯಾದರೂ ಕೃಷಿಗೆ ತಕ್ಷಣದ ಸಮಸ್ಯೆ ಉಂಟಾಗುವುದಿಲ್ಲ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

” ಕಳೆದ ವರ್ಷಕ್ಕೂ ಈ ವರ್ಷಕ್ಕೂ ಹೋಲಿಸಿದರೆ ಮಳೆ ಪ್ರಮಾಣದಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲ. ಮಳೆ ಕೊರತೆಯಿಂದ ಕೃಷಿಗೆ ಹೆಚ್ಚಿನ ಸಮಸ್ಯೆಯಾಗುವುದಿಲ್ಲ. ಈಗಾಗಲೇ ಶೇ.೬೦ರಷ್ಟು ಭತ್ತ ಹಾಗೂ ಶೇ.೮೬ರಷ್ಟು ಮುಸುಕಿನ ಜೋಳ ಬಿತ್ತನೆಯಾಗಿದೆ. ಇತರ ಬೆಳೆಗಳ ಬಿತ್ತನೆಯೂ ನಡೆಯುತ್ತಿದೆ. ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳ ಮೊದಲ ವಾರದೊಳಗೆ ಶೇ.೧೦೦ರಷ್ಟು ಬಿತ್ತನೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.”

ಚಂದ್ರಶೇಖರ್, ಜಂಟಿ ನಿರ್ದೇಶಕರು, ಕೃಷಿ ಇಲಾಖೆ 

” ನಮ್ಮ ವ್ಯಾಪ್ತಿಯಲ್ಲಿ ವಾಡಿಕೆ ಮಳೆ ಆಗಿಲ್ಲ. ಈ ಬಾರಿ ತಡವಾಗಿ ಮಳೆಯಾಗಿದೆ. ಆದರೂ ಎಲ್ಲ ವ್ಯವಸಾಯಕ್ಕೂ ಸದ್ಯಕ್ಕೆ ಮಳೆ ಸಾಕು. ಭತ್ತದ ಕೃಷಿಗೆ ಯಾವುದೇ ಸಮಸ್ಯೆ ಇಲ್ಲ.”

ನವೀನ್ ಅಜ್ಜಳ್ಳಿ, ಕೃಷಿಕರು, ಗೌಡಳ್ಳಿ ಗ್ರಾಮ

 

 

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

16 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

17 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

18 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

19 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

22 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

22 hours ago