ಮಹೇಶ್ ಕರೋಠಿ
ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು ಸರ್ಕಾರಿ ಕಾಮಗಾರಿಗಳು ಪೂರ್ಣಗೊಳ್ಳದೆ ಅರ್ಧಕ್ಕೆ ನಿಂತಿದ್ದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ರಾಮದಲ್ಲಿ ಶಾಲಾ ಮಕ್ಕಳಿಗಾಗಿ ನಿರ್ಮಿಸಲಾಗುತ್ತಿರುವ ಶೌಚಾಲಯ, ಅಂಗನವಾಡಿ ಕಟ್ಟಡ, ವಾಲಿಬಾಲ್ ಕೋರ್ಟ್ ಹಾಗೂ ಶಾಲೆಯ ಅಡುಗೆಮನೆ ಸೇರಿದಂತೆ ಹಲವು ಕಾಮಗಾರಿಗಳು ಅರ್ಧಕ್ಕೆ ನಿಂತು ಹೋಗಿವೆ. ಇದು ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಗುತ್ತಿಗೆದಾರರ ಬೇಜವಾಬ್ದಾರಿತನಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಬಯಲು ಶೌಚಾಲಯವನ್ನು ಸಂಪೂರ್ಣವಾಗಿ ನಿಲ್ಲಿಸಿ, ಶಾಲೆಗಳಲ್ಲಿ ಮಕ್ಕಳಿಗೆ ಅಗತ್ಯವಾದ ಶೌಚಾಲಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಜಾರಿಗೊಳಿಸಿದೆ. ಶಾಲಾ ಮಕ್ಕಳ ಆರೋಗ್ಯ ಮತ್ತು ಸ್ವಚ್ಛತೆಗೆ ಶೌಚಾಲಯ ವ್ಯವಸ್ಥೆ ಅತ್ಯಂತ ಅಗತ್ಯವಾದ ಮೂಲ ಸೌಕರ್ಯಗಳಲ್ಲಿ ಒಂದಾಗಿದೆ. ಆದರೆ ಕ್ಯಾತನಹಳ್ಳಿ ಗ್ರಾಮದ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಿರ್ಮಿಸಲಾಗುತ್ತಿರುವ ಶೌಚಾಲಯ ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ವಿದ್ಯಾರ್ಥಿಗಳು-ವಿದ್ಯಾರ್ಥಿನಿಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಇನ್ನೂ ಆತಂಕಕಾರಿ ವಿಷಯವೆಂದರೆ ಅಂಗನವಾಡಿ ಕೊಠಡಿಯ ಮೇಲ್ಚಾವಣಿಯ ಹೆಂಚುಗಳು ಯಾವಾಗ ಬೇಕಾದರೂ ಕೆಳಗೆ ಬೀಳುವ ಹಂತದಲ್ಲಿದ್ದರೂ ಅದೇ ಕೊಠಡಿಯಲ್ಲಿ ಪುಟ್ಟ ಮಕ್ಕಳನ್ನು ಕೂರಿಸಿ ಪಾಠ ಮಾಡಲಾಗುತ್ತಿದೆ. ಯಾವುದೇ ಕ್ಷಣದಲ್ಲಿ ದೊಡ್ಡ ಅನಾಹುತ ಸಂಭವಿಸಬಹುದಾದ ಪರಿಸ್ಥಿತಿ ಇದ್ದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸದೇ ಮಕ್ಕಳ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದರ ಜೊತೆಗೆ ಶಾಲೆಯಲ್ಲಿ ಅಡುಗೆಮನೆ ನಿರ್ಮಾಣ ಕೆಲಸ ಅಡಿಪಾಯಮಟ್ಟದಲ್ಲೇ ನಿಂತಿದ್ದು, ವರ್ಷಗಳು ಕಳೆದರೂ ಕಾಮಗಾರಿ ಪೂರ್ಣಗೊಳ್ಳದಿರುವುದೂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಸಾರ್ವಜನಿಕರ ಹಣದಲ್ಲಿ ನಡೆಯುವ ಕಾಮಗಾರಿಗಳನ್ನು ಈ ರೀತಿ ಅರ್ಧಕ್ಕೇ ನಿಲ್ಲಿಸಿರುವುದು ಖಂಡನೀಯ. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು, ಅಪೂರ್ಣ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಹೋರಾಟ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.



