ಚಾಮರಾಜನಗರ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲಾಗಿದೆ.
ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯ ಕೊರತೆಯಿಂದ ಎದುರಾಗುವ ಕುಡಿಯುವ ನೀರಿನ ಸಮಸ್ಯೆಗಳಿಗೆ ಗ್ರಾಮೀಣ ಭಾಗದ ಸಾರ್ವಜನಿಕರು ಜಿಲ್ಲಾ ಪಂಚಾಯಿತಿಯ ಸಹಾಯವಾಣಿ ಸಂಖ್ಯೆ ೦೮೨೨೬-೨೨೪೦೧೫ ಅನ್ನು ಸಂಪರ್ಕಿಸಬಹುದು. ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ಸಹಾಯವಾಣಿಗೆ ದೂರು ನೀಡಬಹುದು. ಸ್ವೀಕರಿಸುವ ಸಿಬ್ಬಂದಿಯು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಹಾಗೂ ತಾಲ್ಲೂಕು ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಮನಕ್ಕೆ ತರಲಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯವಿದ್ದರೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಬೇಕು. ಇಲ್ಲವೇ ಬೋರ್‌ವೆಲ್ ಕೊರೆಸಿ ನೀರಿನ ವ್ಯವಸ್ಥೆ ಮಾಡಬೇಕು. ದಿನದ ೨೪ ಗಂಟೆಯೊಳಗೆ ನೀರಿನ ಅಭಾವವನ್ನು ನಿವಾರಿಸಬೇಕಿದೆ. ಸಹಾಯವಾಣಿಗೆ ಯಾವಾಗಲಾದರೂ ಕರೆ ಮಾಡಿ ಸಮಸ್ಯೆ ತಿಳಿಸಬಹುದು ಎಂದು ಜಿಪಂ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಬೀಳದೆ ಇರುವ ಕಾರಣ ಹನೂರು ತಾಲ್ಲೂಕಿನ ವ್ಯಾಪ್ತಿಯ ೨೦ಕ್ಕೂ ಹೆಚ್ಚು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ಜಿಲ್ಲಾ ಪಂಚಾಯಿತಿಯು ಸಮಸ್ಯೆಯನ್ನು ಪರಿಹರಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ.
ನೀರಿನ ಸಮಸ್ಯೆ ತಲೆದೋರಿತ್ತು: ಹನೂರು ತಾಲ್ಲೂಕಿನ ದೊಮ್ಮನಗದ್ದೆ, ಬಂಡಳ್ಳಿ, ಗೊಲ್ಲರದಿಂಬ, ಸತ್ಯಮಂಗಲ, ಕೆಂಪಯ್ಯನ ಹಟ್ಟಿ, ಎಂ.ಟಿ.ದೊಡ್ಡಿ, ಪಳನಿಸ್ವಾಮಿ ದೊಡ್ಡಿ, ಕಾರಗೇರಿ ದೊಡ್ಡಿ, ಬೋಡ ಮುತ್ತುನೂರು, ಚಂಗವಾಡಿ, ಕೆವಿನ್ ದೊಡ್ಡಿ, ತೆಂಗಾಕೋಂಬು, ಪೋಂಗೋಬು, ಅಪ್ಪುಕಂಪಟ್ಟಿ, ಜಂಬೂಟ್ ಪಟ್ಟಿ, ಮಾರಿಕೊಟ್ಟಾಯಿ, ಜಲ್ಲಿಪಾಳ್ಯ, ಕೊಟ್ಟನ ಮೂಲೆ, ಕೂಡ್ಲೂರು, ಕೌದಳ್ಳಿ, ಹೊಸದೊಡ್ಡಿ, ದಂಟಳ್ಳಿ ಮೇಗನೂರು, ಕೆಳಗನೂರು, ಮೆದಗನಾಣೆ, ಕೊಂಬೈ ನಗರ, ಆಲದಮರ ಬಿದರಳ್ಳಿ, ಸುಳ್ವಾಡಿ, ಸಂದನಪಾಳ್ಯ ಅಂತೋನಿಯರ್ ಕೋವಿಲ್, ಮಾಮರ ದೊಡ್ಡಿ, ರಾಮಾಪುರ ಎರಡನೇ ವಾರ್ಡ್, ಗೋಪಿ ಶೆಟ್ಟಿಯೂರು, ಅರಬಗೆರೆ, ಹೊಸಳ್ಳಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿತ್ತು.
ಈಗಾಗಲೇ ಜಿಲ್ಲಾ ಪಂಚಾಯಿತಿಯ ಸಿಇಒ ಮೋನಾ ರೋತ್ ಅವರು ವಿವಿಧ ಗ್ರಾಮಗಳಿಗೆ ಖುದ್ದು ಭೇಟಿ ನೀಡಿ ಸೂಕ್ತ ಕ್ರಮ ವಹಿಸಬೇಕೆಂದು ತಾಲ್ಲೂಕು ಪಂಚಾಯಿತಿ ಇಒ ಉಮೇಶ್ ಹಾಗೂ ಸಂಬಂಧಪಟ್ಟ ಪಿಡಿಒಗಳಿಗೆ ಸೂಚಿಸಿದ್ದಾರೆ. ಶಾಸಕರಾದ ಎಂ.ಆರ್.ಮಂಜುನಾಥ್ ಇತ್ತೀಚೆಗೆ ಕೊಳ್ಳೇಗಾಲದಲ್ಲಿ ಅರಣ್ಯ ಇಲಾಖೆ ಮತ್ತು ಜಿಪಂನ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳ ಸಭೆ ನಡೆಸಿದ್ದರು.
‘ಆಂದೋಲನ’ ವರದಿ ಪ್ರಕಟಿಸಿತ್ತು:
ಹನೂರು ತಾಲ್ಲೂಕಿನ ೩೮ ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ‘ಆಂದೋಲನ’ ದಿನಪತ್ರಿಕೆಯು ಸಮಗ್ರವಾಗಿ ವರದಿ ಮಾಡಿ ಗಮನ ಸೆಳೆದಿತ್ತು. ನೀರಿನ ಕೊರತೆ ಎದುರಿಸುತ್ತಿದ್ದ ಗ್ರಾಮಗಳ ಜನರನ್ನು ಮಾತನಾಡಿಸಿ ವರದಿ ಪ್ರಕಟಿಸಿತ್ತು. ಬಳಿಕ ಸಂಬಂಧಪಟ್ಟ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್, ಶಾಸಕರಾದ ಎ.ಆರ್.ಮಂಜುನಾಥ್ ಅವರನ್ನು ಕೂಡ ಮಾತನಾಡಿಸಿ ನೀರಿನ ಸಮಸ್ಯೆಯನ್ನು ಅವರ ಗಮನಕ್ಕೆ ತಂದಿತ್ತು.
” ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸಹಾಯವಾಣಿಯನ್ನು ಆರಂಭಿಸಲಾಗಿದೆ. ಗ್ರಾಮೀಣ ಭಾಗದ ಸಾರ್ವಜನಿಕರು ಇದನ್ನುಸದುಪಯೋಗ ಮಾಡಿಕೊಳ್ಳಬೇಕು. ದೂರು ನೀಡಿದ ಕೂಡಲೇ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು.”
– ಶ್ರುತಿ, ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…