ನವೀನ್ ಡಿಸೋಜ
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಗತ್ಯ ನಿರ್ದೇಶನ
ವಿವಿಧ ಇಲಾಖೆಗಳಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮ
೨೦೧೮, ೨೦೧೯ರ ಪ್ರಕೃತಿ ವಿಕೋಪದ ಕಹಿ ನೆನಪು
ಜನರು- ಜಾನುವಾರುಗಳ ಪ್ರಾಣ ರಕ್ಷಣೆಗೆ ಆದ್ಯತೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ವ್ಯಾಪಕ ಮಳೆಯಿಂದ ಸಂಭವಿಸಬಹುದಾದ ಅನಾಹುತವನ್ನು ತಡೆಯಲು ಜಿಲ್ಲಾಡಳಿತ ಸನ್ನದ್ಧವಾಗಿದೆ.
ಕೊಡಗು ಜಿಲ್ಲೆಯಲ್ಲಿ ೨೦೧೮, ೨೦೧೯ರ ಪ್ರಕೃತಿ ವಿಕೋಪದ ಬಳಿಕ ಮಳೆಗಾಲ ಆರಂಭದಲ್ಲಿ ಸಹಜವಾಗಿಯೇ ಆತಂಕದ ವಾತಾವರಣ ಮನೆ ಮಾಡುತ್ತಿದೆ. ಜೊತೆಗೆ ಪ್ರತಿವರ್ಷ ಮಳೆ ಗಾಲದಲ್ಲಿ ಒಂದಷ್ಟು ಅನಾಹುತಗಳು ಸಂಭವಿಸುತ್ತಿವೆ. ಹೀಗಾಗಿ ಈ ಬಾರಿಯೂ ಮಳೆಗಾಲದ ಅನಾಹುತ ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆಗೆ ಸೂಚನೆ ನೀಡಲಾಗಿದೆ.
ಮುಂಗಾರು ಸಂದರ್ಭದಲ್ಲಿ ಜನ ಹಾಗೂ ಜಾನುವಾರುಗಳಿಗೆ ಯಾವುದೇ ರೀತಿಯ ಹಾನಿಯಾಗದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಈ ನಿಟ್ಟಿನಲ್ಲಿ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ತಮ್ಮ ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವಹಿಸಲು ನಿರ್ದೇಶನ ನೀಡಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜನರ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗೆ ಅಗ್ನಿಶಾಮಕ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಎನ್‌ಡಿಆರ್‌ಎಫ್ ತಂಡದ ಜೊತೆ ಸಮನ್ವಯ ಸಾಧಿಸಲು ತಿಳಿಸಲಾಗಿದೆ.
ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರವಹಿಸಲಾಗುತ್ತಿದೆ. ಲೋಕೋಪಯೋಗಿ, ಪಂಚಾಯತ್ರಾಜ್ ಇಲಾಖೆಗಳ ಇಂಜಿನಿಯರ್‌ಗಳು ತಮ್ಮ ತಮ್ಮ ವ್ಯಾಪ್ತಿಯ ರಸ್ತೆಗಳನ್ನು ಹಳ್ಳ-ಕೊಳ್ಳಗಳು ಇರದಂತೆ ಸರಿಪಡಿಸಲು ಸೂಚನೆ ನೀಡಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೂಡ ಮಳೆಗಾಲದ ಸವಾಲು ಎದುರಿಸಲು ಸಜ್ಜಾಗಿದ್ದು, ಔಷಽಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ. ಮುಂಗಾರು ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳದಂತೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಕೃಷಿ ಇಲಾಖೆ ಕೂಡ ಮುಂಗಾರು ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಗೆ ಕ್ರಮ ಕೈಗೊಂಡಿದೆ. ರೈತರ ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.
ಮಡಿಕೇರಿ ನಗರದಲ್ಲಿಯೂ ಮುಂಗಾರು ಸಂಬಂಧ ನಗರಸಭೆ ವತಿಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದೆ. ಅಪಾಯಕಾರಿ ಸ್ಥಳದಲ್ಲಿರುವ ನಿವಾಸಿಗಳಿಗೆ ನೋಟಿಸ್ ನೀಡಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ರಾಜಕಾಲುವೆಗಳ ಸ್ವಚ್ಛತೆಗೂ ಕ್ರಮ ಕೈಗೊಳ್ಳಲಾಗಿದೆ.
ಗುಡ್ಡಗಾಡು ಪ್ರದೇಶವಾಗಿರುವ ಕೊಡಗು ಜಿಲ್ಲೆಯಲ್ಲಿ ಪ್ರತಿಬಾರಿಯೂ ಮಳೆಗಾಲದಲ್ಲಿಯೂ ವಿದ್ಯುತ್ ಸಮಸ್ಯೆ ಬಿಗಡಾಯಿಸುತ್ತದೆ. ಹೀಗಾಗಿ ಈ ಬಾರಿ ವಿದ್ಯುತ್ ಮಾರ್ಗಗಳ ದುರಸ್ತಿ, ಮರದ ಕೊಂಬೆಗಳನ್ನು ಕಡಿಯುವುದು, ಶಿಥಿಲಾವಸ್ಥೆಯಲ್ಲಿರುವ ವಿದ್ಯುತ್ ಕಂಬಗಳ ಬದಲಾವಣೆ ಮುಂತಾದ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ತಾತ್ಕಾಲಿಕ ಸಿಬ್ಬಂದಿ ನೇಮಕಕ್ಕೂ ಕ್ರಮ ಕೈಗೊಳ್ಳಲಾಗಿದೆ.
” ಜೂನ್ ತಿಂಗಳಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಪೊಲೀಸ್, ಕಂದಾಯ, ಪಂಚಾಯತ್ ರಾಜ್, ಲೋಕೋಪಯೋಗಿ, ಅಗ್ನಿಶಾಮಕ… ಮುಂತಾದ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಿರುವ ಕಾರ್ಯಗಳ ಬಗ್ಗೆ ಅಗತ್ಯ ಕ್ರಮವಹಿಸುವಂತೆ ನಿರ್ದೇಶನ ನೀಡಲಾಗಿದೆ.”
-ವೆಂಕಟ್ ರಾಜಾ, ಕೊಡಗು ಜಿಲ್ಲಾಧಿಕಾರಿ.
” ಹಿಂದಿನ ಮಳೆಗಾಲಗಳ ಆಧಾರದಲ್ಲಿ ಅಪಾಯಕಾರಿ ಮತ್ತು ಹೆಚ್ಚು ಸಮಸ್ಯೆಯಾಗುವ ಬಡಾವಣೆಗಳನ್ನು ಗುರುತಿಸಲಾಗಿದ್ದು, ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸೂಚನೆಯಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಪಾಯಕಾರಿ ಸ್ಥಳದಲ್ಲಿರುವ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿ ನೋಟಿಸ್ ನೀಡಲಾಗುವುದು. ರಾಜಕಾಲುವೆಗಳ ಸ್ವಚ್ಛತೆಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು, ತಿಂಗಳಾಂತ್ಯದಲ್ಲಿ ಕಾಲುವೆಗಳ ಸ್ವಚ್ಛತೆ ನಡೆಯಲಿದೆ.”
-ಎಚ್.ಆರ್.ರಮೇಶ್, ಪೌರಾಯುಕ್ತರು