ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪರಿಕಲ್ಪನೆಗೆ ತದ್ವಿರುದ್ಧವಾಗಿ ಕೃಷ್ಣರಾಜಸಾಗರದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸಿ ಕೆಆರ್‌ಎಸ್ ಘನತೆಗೆ ಧಕ್ಕೆ ತರುವುದು ಬೇಡ ಎಂದು ಪ್ರೊ.ಬಿ.ಆರ್.ಚಂದ್ರಶೇಖರ್ ಅವರು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಪತ್ರ ಬರೆದಿರುವುದು ಶ್ಲಾಘನೀಯ.
ಈ ಯೋಜನೆ ಕೈಗೊಳ್ಳುವುದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೆ ಭಾರೀ ಪ್ರಮಾಣದ ತ್ಯಾಜ್ಯ ಸಂಗ್ರಹವಾಗಿ ಪ್ರತಿಕೂಲ ಪರಿಣಾಮ ಉಂಟಾಗಿ, ಕೆಆರ್‌ಎಸ್ ಕಸದ ತೊಟ್ಟಿಯಾಗಿ ಮಾರ್ಪಡುವುದರಲ್ಲಿ ಅನುಮಾನವೇ ಇಲ್ಲ. ಈ ಯೋಜನೆಗೆ ಸಾರ್ವಜನಿಕ ವಲಯದಲ್ಲಿ ಹಾಗೂ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರೂ ಸರ್ಕಾರ ಈ ಯೋಜನೆಯನ್ನು ಪ್ರಾರಂಭಿಸಲು ಆಸಕ್ತಿ ತೋರಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಕೃಷ್ಣರಾಜಸಾಗರ ಜಲಾಶಯ ಹಳೇ ಮೈಸೂರು ಭಾಗದ ಜನರ ಜೀವನಾಡಿಯಾಗಿದೆ. ಜೊತೆಗೆ ಸಾರ್ವಜನಿಕರ ವ್ಯಾಪಕ ವಿರೋಧ ಇರುವುದರಿಂದ ಸರ್ಕಾರ ಈ ಯೋಜನೆಯನ್ನು ಕೈಬಿಡುವುದು ಒಳಿತು
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು



