Mysore
21
overcast clouds

Social Media

ಸೋಮವಾರ, 07 ಅಕ್ಟೋಬರ್ 2024
Light
Dark

ನಾಗಮಂಗಲ ಶಾಂತ ಸ್ಥಿತಿ: 54 ಮಂದಿ ಬಂಧನ, ಶಾಂತಿ ಕಾಪಾಡಲು ಮನವಿ

ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಲಭೆ ಉಂಟಾಗಿ, ನಲುಗಿ ಹೋಗಿರುವ ನಾಗಮಂಗಲದಲ್ಲಿ ಪ್ರಸ್ತುತದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದರು, ಶಾಂತಿ ನೆಲೆಸಿದೆ. ಪ್ರಕರಣ ಸಂಬಂಧ ಈವರೆಗೂ ೫೪ ಮಂದಿಯನ್ನು ಬಂಧಿಲಾಗಿದೆ. ಈ ಮಧ್ಯೆ ಎಲ್ಲ ರಾಜಕೀಯ ನಾಯಕರು ಶಾಂತಿ ಕಾಪಾಡಲು ಮನವಿ ಮಾಡಿದ್ದಾರೆ. ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿಯವರು ಮಾತನಾಡಿ, ಘಟನೆ ಸಂಬಂಧ ಈವರೆಗೂ ೫೪ ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಬಲೆ ಬೀಸಲಾಗಿದ್ದು. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ. ೧೪೪ನೇ ಸೆಕ್ಷನ್ ಜಾರಿ: ಬುಧವಾರ ರಾತ್ರಿಯಿಂದ ಸೆ. ೧೪ರವರೆಗೆ ನಾಗಮಂಗಲದಲ್ಲಿ ೧೪೪ ಸೆಕ್ಷನ್ ಜಾರಿಗೊಳಿಸಲಾಗಿದೆ. ಮದ್ಯ ಮಾರಾಟವನ್ನು ನಿಷೇಽಸಲಾಗಿದೆ. ಗುರುವಾರ ಪಟ್ಟಣದ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಜಿಲ್ಲಾ ಪೊಲೀಸ್ ಅಽಕ್ಷಕರು, ಐಜಿಪಿ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಕೆಎಸ್‌ಆರ್‌ಪಿ ತುಕಡಿ ಸ್ಥಳದಲ್ಲಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರು ನಾಗಮಂಗಲಕ್ಕೆ ಭೇಟಿ ನೀಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ಸದಸ್ಯ ಸಿ. ಟಿ. ರವಿ, ಜಾ. ದಳ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮುಂತಾದವರು ಸ್ಥಳಕ್ಕೆ ಭೇಟಿ ನೀಡಿದ್ದರು. ಏನಿದು ಪ್ರಕರಣ? ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಲ್ಲಿ ಕಳೆದ ೫ ದಿನಗಳ ಹಿಂದೆ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಬುಧವಾರ ಸಂಜೆ ಅದ್ಧೂರಿಯಾಗಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಂಡಿದ್ದರು. ಪಟಾಕಿ ಸಿಡಿಸುತ್ತಾ, ಡೊಳ್ಳು, ತಮಟೆ, ಡಿಜೆ ಸೌಂಡ್‌ನೊಂದಿಗೆ ಗಣೇಶನ ಮೂರ್ತಿ ವಿಸರ್ಜನೆಗೆ ಮೆರವಣಿಗೆ ಹೊರಟಿದ್ದರು.

ಬದರಿಕೊಪ್ಪಲಿನಿಂದ ಹೊರಟ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ಮಂಡ್ಯ ಸರ್ಕಲ್ ಮಾರ್ಗವಾಗಿ ತೆರಳಿತ್ತು. ಆದರೆ, ನಾಗಮಂಗಲದ ಮಂಡ್ಯ ಸರ್ಕಲ್ ಬಳಿಯೇ ಕೆಲ ಯುವಕರು ಮೆರವಣಿಗೆಗೆ ತಡೆಯೊಡ್ದಿದ್ದಾರೆ. ಧಾರ್ಮಿಕ ಸ್ಥಳದ ಮುಂದೆ ಡಿಜೆ ಸೌಂಡ್, ತಮಟೆ, ಡೊಳ್ಳು ಬಾರಿಸದಂತೆ ಕ್ಯಾತೆ ತೆಗಿದ್ದಿದ್ದಾರೆ. ಈ ವೇಳೆ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಒಂದು ಗುಂಪಿನ ಯುವಕರ ಕ್ಯಾತೆಗೆ ಕೇರ್ ಮಾಡದ ಮತ್ತೊಂದು ಗುಂಪು ಮೈಸೂರು ರಸ್ತೆಯಲ್ಲಿರುವ ಧಾರ್ಮಿಕ ಸ್ಥಳದ ಮುಂಭಾಗದ ರಸ್ತೆಯಲ್ಲಿ ಮೆರವಣಿಗೆ ಹೊರಟಿದೆ. ಡಿಜೆ ಸೌಂಡ್ ಜತೆ ಡೊಳ್ಳು, ತಮಟೆ ಸದ್ದಿನೊಂದಿಗೆ ಪಟಾಕಿ ಸಿಡಿಸುತ್ತಾ ಸಂಭ್ರಮದಿಂದ ಹೆಜ್ಜೆ ಹಾಕಿದೆ. ಇನ್ನೇನು ಧಾರ್ಮಿಕ ಸ್ಥಳ ಸ್ವಲ್ಪ ದೂರ ಇದೆ ಎನ್ನುವಾಗ ಇನ್ನೊಂದು ಗುಂಪಿನ ಯುವಕರು ಏಕಾಏಕಿ ಗಣೇಶ ವಿಸರ್ಜನಾ ಮೆರವಣಿಗೆಯತ್ತ ಕಲ್ಲು ತೂರಾಟ ನಡೆಸಿದ್ದಾರೆ. ಕಟ್ಟಡದ ಮೇಲೆ ನಿಂತುಕೊಂಡು ಮನಬಂದಂತೆ ಕಲ್ಲು ತೂರಾಟ ನಡೆಸಿದ್ದಾರೆ.

ನಿರ್ದಾಕ್ಷಿಣ್ಯ ಕ್ರಮ:ಸಿಎಂ ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯವಾಗಿದ್ದು, ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಪೊಲೀಸರ ವೈಫಲ್ಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆಯ ವೇಳೆ ಮತಾಂಧ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದರಿಂದ ಉದ್ಭವಿಸಿರುವ ಪ್ರಕ್ಷುಬ್ಧ ಪರಿಸ್ಥಿತಿ ಅತ್ಯಂತ ಆತಂಕಕಾರಿ ಬೆಳವಣಿಗೆ. ಈ ಹಿಂದಿನ ವರ್ಷವೂ ಪುಂಡರು ಇದೇ ರೀತಿ ವರ್ತಿಸಿದ್ದ ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗ್ರತೆಯಡಿ ಕಟ್ಟೆಚ್ಚರ ವಹಿಸವಲ್ಲಿ ಎಚ್ಚರ ತಪ್ಪಿರುವುದು ಸ್ಪಷ್ಟವಾಗಿದೆ. ? ಬಿ. ವೈ. ವಿಜಯೇಂದ್ರ, ರಾಜ್ಯ ಬಿಜೆಪಿ ಅಧ್ಯಕ್ಷ

ಶಾಂತಿ ಕಾಪಾಡಲು ಮನವಿ ಸಾರ್ವಜನಿಕರು ಶಾಂತಿ ಕಾಪಾಡ ಬೇಕು. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ; ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿರುವುದು ಆಕಸ್ಮಿಕವಾಗಿ ನಡೆದ ಕಲ್ಲು ತೂರಾಟ, ಇದೊಂದು ಸಣ್ಣ ಘಟನೆಯಾಗಿದ್ದು ಕೋಮು ಗಲಭೆ ಎಂದು ಹೇಳುವುದು ತಪ್ಪಾಗುತ್ತದೆ. ಇದನ್ನು ಹೆಚ್ಚು ಬೆಳೆಯಲು ಪೊಲೀಸರು ಬಿಟ್ಟಿಲ್ಲ. ಹೆಚ್ಚು ಪ್ರಚಾರ ನೀಡುವುದೂ ಬೇಡ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. – ಡಾ. ಜಿ. ಪರಮೇಶ್ವರ್, ಗೃಹ ಸಚಿವ

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದವರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂದಲೆ ಎಬ್ಬಿಸಿ ಸಾರ್ವ ಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಛೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರು ವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ. – ಎಚ್. ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ

ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣ. ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ. – ಆರ್. ಅಶೋಕ್, ವಿಪಕ್ಷ ನಾಯಕ

 

 

Tags: