Mysore
21
scattered clouds
Light
Dark

‘ನಿಯಮ ಪಾಲಿಸಿ, ಗಣೇಶನ ಹಬ್ಬ ಆಚರಿಸಿ’: ಆಯೋಜಕರಿಗೆ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಸೂಚನೆ

ಮೈಸೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳುವುದರ ಜತೆಗೆ ಗಣೇಶಮೂರ್ತಿ ಪ್ರತಿಷ್ಠಾಪಿಸುವ ಆಯೋಜಕರು ಹಾಗೂ ಸಮಿತಿ ಸದಸ್ಯರು ಕೆಲವು ಸೂಚನೆಗಳನ್ನು ಪಾಲಿಸಬೇಕು ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ತಿಳಿಸಿದ್ದಾರೆ.

ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಮುಂಜಾಗ್ರತಾ ಕ್ರಮಗಳನ್ನು ಆಯೋಜಕರು ಕೈಗೊಳ್ಳಬೇಕು. ಗಣೇಶಮೂರ್ತಿ ಪ್ರತಿಷ್ಠಾಪನೆಗಾಗಿ ಜನರಿಂದ ಬಲವಂತವಾಗಿ ಹಣ ವಸೂಲಿ ಮಾಡಿ ತೊಂದರೆ ಕೊಟ್ಟರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಗಿ ಬಂದೋಬಸ್ತ್: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಗರದಾದ್ಯಂತ ಬಂದೋಬಸ್ತ್ ಏರ್ಪಡಿಸಿದ್ದು, ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ನಗರದ ಸಿಎಆರ್‌ನ 4 ತುಕಡಿ ಪೊಲೀಸರು, ಕಮಾಂಡೋ ಪಡೆ, ಅಶ್ವಾರೋಹಿ ದಳ, ಮಹಿಳಾ ಪೊಲೀಸ್ ಸೇರಿದಂತೆ ಇನ್ನೂರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಡಿಸಿಪಿ ಎಂ. ಮುತ್ತುರಾಜ್ ಮಾಹಿತಿ ನೀಡಿದ್ದಾರೆ. ರಾತ್ರಿ 6 ಗಂಟೆಗೂ ಮುನ್ನ ಮೆರವಣಿಗೆಯನ್ನು ನಡೆಸಬೇಕು. ಗಣೇಶ ವಿಸರ್ಜನೆ ಸಂಬಂಧ ಕಾರ್ಯಕ್ರಮ ಆಯೋಜಕರು ದಿನಾಂಕ ಹಾಗೂ ವೇಳೆಯನ್ನು ಮುಂಚಿತವಾಗಿ ಆಯಾ ಪೊಲೀಸ್‌ ಠಾಣೆಯ ಅಧಿಕಾರಿಗಳಿಗೆ ತಿಳಿಸಬೇಕು, ವಿಸರ್ಜನೆ ವೇಳೆ ಅಹಿತಕರ ಘಟನೆಗಳು ನಡೆದಲ್ಲಿ ಆಯೋಜಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಪೊಲೀಸ್‌ ಆಯುಕ್ತರ ಸೂಚನೆಗಳಿವು…

• ಗಣೇಶ ಮೂರ್ತಿ ಪ್ರತಿಷ್ಠಾಪನೆ ನೆಪದಲ್ಲಿ ವಾಹನ ಸಂಚಾರ ವ್ಯವಸ್ಥೆಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ವಿನಾಕಾರಣ ರಾತ್ರಿ ವೇಳೆ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ತೊಂದರೆ ಕೊಡಬಾರದು.
• ಬಡಾವಣೆಗಳಲ್ಲಿ ಎಲ್ಲೆಂದರಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಬಾರದು, ಪೊಲೀಸರು ಸೂಚಿಸಿದ ಸ್ಥಳಗಳಲ್ಲಿ ಮೂರ್ತಿ ಪ್ರತಿಷ್ಠಾಪಿಸಬೇಕು
• ಸಾರ್ವಜನಿಕರಿಗೆ ತೊಂದರೆಯಾಗುವಂತೆ ಧ್ವನಿವರ್ಧಕಗಳನ್ನು ಬಳಸಬಾರದು
• ಗಣೇಶ ಮೂರ್ತಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಮೊದಲು ಸಂಬಂಧಪಟ್ಟ ಪೊಲೀಸ್ ಠಾಣೆಯಿಂದ ಅನುಮತಿ ಪಡೆಯಬೇಕು
* ಸಾರ್ವಜನಿಕರು ಮತ್ತು ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು
• ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿಯನ್ನು ಪ್ರತಿಷ್ಠಾಪಿಸುವವರು ಕಡ್ಡಾಯವಾಗಿ ಪೆಂಡಾಲ್‌ಗೆ ಸಿಸಿಟಿವಿ ಅಳವಡಿಸಬೇಕು
• ಸಿಸಿ ಕ್ಯಾಮೆರಾಗಳನ್ನು ಆಯೋಜಕರು ಅಳವಡಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಗಣಪತಿ ಪೆಂಡಾಲ್‌ಗಳು ಬೆಂಕಿ ನಂದಿಸುವ ಸಾಮಗ್ರಿಗಳನ್ನು ಹೊಂದಿರಬೇಕು ನಗರಪಾಲಿಕೆ, ಸೆಸ್‌, ಅಗ್ನಿಶಾಮಕ ಹಾಗೂ ಸಂಚಾರ ಪೊಲೀಸರಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರಾಕ್ಷೇಪಣಾ ಪತ್ರ ಪಡೆಯಬೇಕು.
• ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು