ಎಲ್ಲ ಚುನಾಯಿತ ಪ್ರತಿನಿಧಿಗಳೂ ಹಾಗೂ ಸರ್ಕಾರಿ ಅಧಿಕಾರಿಗಳು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿಯೇ ಓದಿಸಬೇಕು ಆಗ ಮಾತ್ರ ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗಲು ಸಾಧ್ಯ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿರುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿದೆ.
ಇದು ಅಕ್ಷರಶಃ ಸತ್ಯ. ಇಂತಹದೊಂದು ಒತ್ತಾಯ ಬಹಳ ಹಿಂದಿನಿಂದಲೂ ಕೇಳಿಬರುತ್ತಲೇ ಇದೆ. ಜನಪ್ರತಿನಿಧಿಗಳಾದವರು ಜನರಿಗೆ ಮಾದರಿಯಾಗುವಂತಿರಬೇಕು. ಸಾರ್ವಜನಿಕರಿಗೆ ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಿ ಎಂದು ಹೇಳುವ ಮೊದಲು ಇವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು. ಇವರೂ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು.
ಇವರ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದುತ್ತಿಲ್ಲ, ಇವರ ಕುಟುಂಬ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿಲ್ಲ ಎಂದರೆ ಅಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ವೈದ್ಯಕೀಯ ಸೌಲಭ್ಯ ದೊರಕುತ್ತಿಲ್ಲ ಎಂದಾಗುತ್ತದೆ. ಜನಸಾಮಾನ್ಯರಂತೆ ಅವರೂ ತಮ್ಮ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಕೊಡಿಸಲು ಮುಂದಾದರೆ ಸರ್ಕಾರಿ ಶಾಲೆಗಳು ಮತ್ತು ಆಸ್ಪತ್ರೆಗಳು ತಾವಾಗಿಯೇ ಅಭಿವೃದ್ಧಿಯಾಗುತ್ತವೆ. ಅಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ವೈದ್ಯಕೀಯ ಸೌಲಭ್ಯ ದೊರಕುತ್ತದೆ. ಆದ್ದರಿಂದ ಜನಪ್ರತಿನಿಽಗಳ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದಬೇಕು ಮತ್ತು ಜನಪ್ರತಿನಿಧಿಗಳು ಮತ್ತು ಅವರ ಕುಟುಂಬ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯ ಪಡೆದುಕೊಳ್ಳಬೇಕು ಎಂಬುದನ್ನು ಕಡ್ಡಾಯ ಗೊಳಿಸಬೇಕಿದೆ.
–ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.