ಮಕ್ಕಳ ಅಪೌಷ್ಟಿಕತೆ ನಿವಾರಿಸಿ, ಅವರ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿರುವ ಬಿಸಿಯೂಟ ಯೋಜನೆಯನ್ನು ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೂ ವಿಸ್ತರಿಸುವ ಅಗತ್ಯವಿದೆ.
ಗ್ರಾಮೀಣ ಪ್ರದೇಶಗಳಿಂದ ನಗರಕ್ಕೆ ವ್ಯಾಸಂಗಕ್ಕಾಗಿ ಬರುವ ಬಡ ವಿದ್ಯಾರ್ಥಿಗಳು ಸಕಾಲಕ್ಕೆ ಊಟ ಸಿಗದೇ ಹಸಿವಿನಿಂದ ಬಳಲುವಂತಾಗಿದೆ. ಊಟದ ಸಮಸ್ಯೆಯಿಂದಾಗಿಯೇ ವಿದ್ಯಾರ್ಥಿಗಳು ವ್ಯಾಸಂಗವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಹಾಜರಾತಿ ಪ್ರಮಾಣವನ್ನೂ ಹೆಚ್ಚಿಸಲು ಮುಂದಾಗಬೇಕಿದೆ. ಈ ಕುರಿತು ರಾಜ್ಯ ಸರ್ಕಾರವು ಗಂಭೀರವಾಗಿ ಚಿಂತನೆ ನಡೆಸಬೇಕಾಗಿದೆ.
-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು





