ಹನೂರು ತಾಲ್ಲೂಕಿನ ರಾಮಾಪುರ ಪಂಚಾಯಿತಿ ವ್ಯಾಪ್ತಿಯ ಪಳನಿಮೇಡು ಗ್ರಾಮದ ಮಕ್ಕಳು ರಾಮಾಪುರ ಹೋಬಳಿಯ ಎಲ್ಲಾ ಕೆರೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದು ಶ್ಲಾಘನೀಯ.
ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ಕೃಷಿ ಚಟುವಟಿಕೆಗಳು ಸರಿಯಾಗಿ ನಡೆಯದೆ, ಜನರು ಬೇಸಾಯ ಬಿಟ್ಟು ಉದ್ಯೋಗಕ್ಕಾಗಿ ವಲಸೆ ಹೋಗುತ್ತಿದ್ದು, ಅವರ ಸ್ಥಿತಿಯನ್ನು ಕಂಡ ಗ್ರಾಮದ ಮಕ್ಕಳು, ಕೆರೆಗಳಿಗೆ ನೀರು ತುಂಬಿಸಿ ಎಂದು ಮುಖ್ಯಮಂತ್ರಿಗಳಿಗೆ ನೇರವಾಗಿ ಪತ್ರ ಬರೆದು ಗಮನ ಸೆಳೆದಿದ್ದಾರೆ. ಮುಖ್ಯಮಂತ್ರಿಗಳು ಮಕ್ಕಳ ಈ ಪತ್ರಕ್ಕೆ ಸ್ಪಂದಿಸಿ ಕೆರೆ, ಕಟ್ಟೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು





