ಸರಗೂರು ಮುಖ್ಯ ರಸ್ತೆಯಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜು ಅವ್ಯವಸ್ಥೆಗಳ ಆಗರವಾಗಿದ್ದು, ಕಟ್ಟಡದ ಗೋಡೆಗಳು ಕುಸಿದು ಬೀಳುವ ಹಂತಕ್ಕೆ ಬಂದು ತಲುಪಿವೆ.
ತಾಲ್ಲೂಕಿನ ಬಿಡಗಲು ಸಮೀಪದ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಒಂದೇ ಆವರಣದಲ್ಲಿದ್ದು, ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಈ ಶಾಲೆ ಮತ್ತು ಕಾಲೇಜಿನ ಕಟ್ಟಡದ ಕೆಲ ಗೋಡೆಗಳು ಕುಸಿದು ಬಿದ್ದಿದ್ದು, ಕೆಲ ಗೋಡೆಗಳು ಬಿರುಕು ಬಿಟ್ಟಿವೆ. ಅಲ್ಲದೆ ಕೆಲ ಭಾಗಗಳಲ್ಲಿ ಹೆಂಚುಗಳು ಮುರಿದು ಬಿದ್ದಿವೆ. ಇನ್ನು ಇಲ್ಲಿ ಶೌಚಾಲಯದ ವ್ಯವಸ್ಥೆಯೂ ಸರಿಯಾಗಿಲ್ಲ. ಹೀಗಾಗಿ ಶಾಲಾ-ಕಾಲೇಜಿನ ವಿದ್ಯಾರ್ಥಿನಿಯರಿಗೆ ತೊಂದರೆಯಾಗುತ್ತಿದೆ. ಶುದ್ದ ಕುಡಿಯುವ ನೀರಿನ ಸಮಸ್ಯೆಯೂ ಕಾಡುತ್ತಿದ್ದು, ವಿದ್ಯಾರ್ಥಿಗಳು ಮನೆಯಿಂದಲೇ ನೀರು ತಂದು ಕುಡಿಯಬೇಕಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಕಾಲೇಜಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಕಟ್ಟಡವನ್ನು ದುರಸ್ತಿಗೊಳಿಸುವ ಜತೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕಿದೆ.
–ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.