Mysore
17
scattered clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಓದುಗರ ಪತ್ರ: ಕೋಮು ಗಲಭೆಗಳಿಗೆ ಕಡಿವಾಣ ಹಾಕಿ

ಓದುಗರ ಪತ್ರ

ಮೈಸೂರಿನ ಉದಯಗಿರಿಯಲ್ಲಿ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಅವಹೇಳನಕಾರಿ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಶುರುವಾದ ಗಲಾಟೆಯನ್ನು ತಿಳಿಗೊಳಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ.

ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಅವಹೇಳನಕಾರಿ ಪೋಸ್ಟ್‌ನ್ನು ಖಂಡಿಸಿ ಆತನನ್ನು ಬಂಧಿಸುವಂತೆ ಒತ್ತಾಯಿಸಿ ಒಂದು ಸಮುದಾಯದ ಮುಖಂಡರು ಉದಯಗಿರಿ ಪೊಲೀಸ್ ಠಾಣೆ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೋಸ್ಟ್ ಮಾಡಿದ ವ್ಯಕ್ತಿಯನ್ನು ಬಂಧನದ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡುತ್ತಾರೆ

ಎಂಬ ಗಾಳಿ ಸುದ್ದಿ ಹರಡುತ್ತಿದ್ದಂತೆ ಆರೋಪಿಯನ್ನು ಬಿಟ್ಟು ಬಿಡುತ್ತಾರೆ ಎಂಬ ತಪ್ಪು ಕಲ್ಪನೆಯಿಂದ ಗದ್ದಲ ಉಂಟಾಗಿ ಕೆಲವರು ಪೊಲೀಸ್ ಠಾಣೆ ಹಾಗೂ ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ, ಕಲ್ಲು ತೂರಾಟ ನಡೆಸಿದವರ ಪತ್ತೆಗಾಗಿ ತಂಡಗಳನ್ನು ರಚಿಸಿ, ಕಾರ್ಯಾಚರಣೆ ಆರಂಭಿಸಿದೆ. ಈಗಾಗಲೇ ಕೆಲವರನ್ನು ಗುರುತಿಸಿದ್ದು, ಕೆಲವರನ್ನು ಬಂಧಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇಂತಹ ಕೋಮುಗಲಭೆಯ ಪ್ರಕರಣಗಳು ಹೆಚ್ಚಾಗುತ್ತಿರುವುದು ದುರದೃಷ್ಟಕರ ಸಂಗತಿ. ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ಇಬ್ಭಾಗಿಸಲು ಕೆಲ ಧರ್ಮಾಂಧರು ಯತ್ನಿಸುತ್ತಿದ್ದು, ಅಂತಹವರು ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ಅವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.

ಶಾಂತಿ, ಅಹಿಂಸೆ ಎಲ್ಲ ಧರ್ಮಗಳ ಮೂಲ ಮಂತ್ರವಾಗಬೇಕು. ಆದರೆ ಕೆಲ ಕಿಡಿಗೇಡಿಗಳು ಧರ್ಮವನ್ನು ಮುಂದಿಟ್ಟುಕೊಂಡು ಸಮಾಜದ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದು, ಗಲಭೆ ಸೃಷ್ಟಿಸುತ್ತಿದ್ದಾರೆ. ಇನ್ನು ಕೆಲವರು ಈ ಗಲಭೆಯಿಂದ ರಾಜಕೀಯ ಲಾಭ ಪಡೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಅಶಾಂತಿ ಹೆಚ್ಚಾಗುತ್ತಿದೆ. ಆದ್ದರಿಂದ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಲಿ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

Tags:
error: Content is protected !!