ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕುಗಳ ಕಾಡಂಚಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹುಲಿಗಳು ಜನ ಹಾಗೂ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ರೈತರು ಮೃತಪಟ್ಟಿರುವ ಘಟನೆಗಳು ಆತಂಕಕಾರಿಯಾಗಿವೆ. ಈ ಭಾಗದ ರೈತರು ಕೃಷಿ ಚಟುವಟಿಕೆಗಾಗಿ ಜಮೀನಿಗೆ ತೆರಳಲು ಭಯಪಡುವಂತಾಗಿದೆ.
ಈ ಬಗ್ಗೆ ಅರಣ್ಯ ಇಲಾಖೆಯವರಿಗೆ ರೈತರು ಹಲವಾರು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ವನ್ಯಜೀವಿಗಳ ದಾಳಿಯಿಂದ ಜಾನುವಾರುಗಳು ಹಾಗೂ ರೈತರು ಮೃತಪಟ್ಟರೆ ಒಂದಷ್ಟು ಪರಿಹಾರ ನೀಡುತ್ತಾರೆ. ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಯವರು ಕೂಡಲೇ ಕಾಡಂಚಿನ ಗ್ರಾಮಗಳಲ್ಲಿ ಹುಲಿ, ಚಿರತೆ ಮೊದಲಾದ ವನ್ಯಜೀವಿಗಳ ಹಾವಳಿ ತಡೆಗಟ್ಟಲು ಕ್ರಮ ಕೈಗೊಳ್ಳಬೇಕಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.





