Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

9 ತಿಂಗಳೂ ಕಳೆದರೂ ಅಭಿವೃದ್ಧಿ ಕಾಣದ ರಸ್ತೆ

road repair (1)

ಕೃಷ್ಣ ಸಿದ್ದಾಪುರ

ಪ್ರತಿ ದಿನ ನರಕಯಾತನೆ ಅನುಭವಿಸುತ್ತಿರುವ ಸ್ಥಳೀಯರು; ಏಳು ದಿನಗಳಲ್ಲಿ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ ಬೃಹತ್ ಪ್ರತಿಭಟನೆ ಎಚ್ಚರಿಕೆ 

ಸಿದ್ದಾಪುರ: ಯಾವುದೇ ರಸ್ತೆಯನ್ನು ಅಗೆದ ನಂತರ ಸ್ಥಳೀಯರಿಗೆ ಸಮಸ್ಯೆಯಾಗದಂತೆ ಒಂದೆರಡು ತಿಂಗಳಲ್ಲಿ ಕಾಮಗಾರಿ ಮಾಡಲಾಗುತ್ತದೆ. ಆದರೆ, ಸಿದ್ದಾಪುರದಲ್ಲಿರುವ ರಸ್ತೆಯನ್ನು ಅಗೆದು ಹದಗೆಡಿಸಿದಲ್ಲದೆ, ಕಾಮಗಾರಿಯನ್ನೂ ನಡೆಸದೆ ೯ ತಿಂಗಳಿನಿಂದ ಈ ವ್ಯಾಪ್ತಿಯ ನಿವಾಸಿಗಳು ನರಕಯಾತನೆ ಅನುಭವಿಸುತ್ತಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ತೀವ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದಲ್ಲಿ ಹೊರರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿಯ ಸಂಪರ್ಕದ ಸಿದ್ದಾಪುರ ಮುಖ್ಯರಸ್ತೆ ೯ ತಿಂಗಳು ಕಳೆದರೂ ಕಾಮಗಾರಿ ಪೂರ್ಣವಾಗದೆ ಸಂಕಷ್ಟದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದಿಸದ ಹಿನ್ನೆಲೆಯಲ್ಲಿ ಏಳು ದಿನಗಳಲ್ಲಿ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ ಬೃಹತ್ ಪ್ರತಿಭಟನೆ ಹೋರಾಟ ನಡೆಸಬೇಕಾಗುತ್ತದೆ ಎಂದು ಸಂಘ-ಸಂಸ್ಥೆಗಳ ಪ್ರಮುಖರು ಎಚ್ಚರಿಸಿದ್ದಾರೆ.

ರಸ್ತೆ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ನವೆಂಬರ್ ತಿಂಗಳಲ್ಲಿ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದ್ದರು. ಇದೀಗ ೯ ತಿಂಗಳು ಕಳೆದರೂ ಗುತ್ತಿಗೆದಾರರ ನಿರ್ಲಕ್ಷ ದಿಂದ ಕಾಮಗಾರಿ ವಿಳಂಬವಾಗಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪಾಲಿಬೆಟ್ಟ ರಸ್ತೆಯಿಂದ ಅಯ್ಯಪ್ಪಸ್ವಾಮಿ ದೇವಸ್ಥಾನದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಚರಂಡಿ ನಿರ್ಮಿಸಲಾಗುತ್ತಿದ್ದು, ರಸ್ತೆಯು ಸಂಪೂರ್ಣ ಹೊಂಡ ಗುಂಡಿಗಳಿಂದ ಆವೃತ್ತವಾಗಿ ಸಾರ್ವಜನಿಕರ ನೆಮ್ಮದಿಯ ಬದುಕಿಗೆ ಸಂಕಷ್ಟವನ್ನು ತಂದೊಡ್ಡಿದೆ. ರಸ್ತೆಗಳ ಅಭಿವೃದ್ಧಿ ಮರೀಚಿಕೆಯಾಗಿದೆ. ಮುಖ್ಯರಸ್ತೆಯಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ವಾಹನ ಚಾಲಕರು ಹದಗೆಟ್ಟ ರಸ್ತೆಯಲ್ಲಿ ಸಂಚರಿಸಲು ಹರಸಾಹಸಪಡುವಂತಾಗಿದೆ.

ಸೇತುವೆ ನಿರ್ಮಾಣಕ್ಕೆ ಎಂದು ಭಾರಿ ಗಾತ್ರದ ಗುಂಡಿವೊಂದನ್ನು ತೆಗೆಯಲಾಗಿದ್ದು, ಪೈಪ್ ಅಳವಡಿಸದೆ ಹಾಗೆಯೇ ಬಿಡಲಾಗಿದೆ. ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೂ ಸಮಸ್ಯೆ ಆಗುತ್ತಿದ್ದು, ಅಪಘಾತಕ್ಕೆ ಆಹ್ವಾನ ನೀಡುವಂತಿದೆ. ಮಳೆಗಾಲದಲ್ಲಿ ಕೆಸರು ತುಂಬಿಕೊಂಡು ಶಾಲೆ ವಿದ್ಯಾರ್ಥಿಗಳು, ಸಾರ್ವಜನಿಕರು ಈ ರಸ್ತೆಯಲ್ಲಿ ಸಂಚರಿಸಲು ತೊಂದರೆ ಅನುಭವಿಸಬೇಕಿದೆ.

ಇತ್ತೀಚೆಗೆ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಮಗಾರಿ ಪೂರ್ಣ ಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ. ಗುತ್ತಿಗೆದಾರ ಮಾತ್ರ ಆಮೆ ನಡಿಗೆಯ ರೀತಿಯಲ್ಲಿ ಕಾಮಗಾರಿ ಮಾಡುತ್ತಿದ್ದಾರೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಗಮನಹರಿಸಿ ಕಾಮಗಾರಿ ಪೂರ್ಣಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

” ಗುತ್ತಿಗೆದಾರ ಕೈಗೊಂಡಿರುವ ಕಾಮಗಾರಿ ಆಮೆವೇಗದಲ್ಲಿ ಸಾಗಿದ್ದು, ಅದನ್ನು ಪೂರ್ಣಗೊಳಿಸದೆ ಇರುವುದರಿಂದ ಸ್ಥಳೀಯರು, ವಾಹನ ಸವಾರರು, ಶಾಲಾ ವಿದ್ಯಾರ್ಥಿಗಳು ಸಂಚರಿಸಲು ತೊಂದರೆಯಾಗಿದೆ. ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸದಿದ್ದಲ್ಲಿ ವಾಹನ ಚಾಲಕರು ಹಾಗೂ ವಿವಿಧ ಸಂಘ ಸಂಸ್ಥೆಗಳನ್ನು ಒಗ್ಗೂಡಿಸಿ ಪ್ರತಿಭಟನೆ ನಡೆಸಬೇಕಾಗುತ್ತದೆ.”

-ಸತೀಶ್, ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷ

” ಹದಗೆಟ್ಟಿರುವ ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಸರು ಹಾಗೂ ದೂಳಿನಿಂದ ವಾಹನ ಚಾಲಕರಿಗೆ ಸಮಸ್ಯೆಯುಂಟಾಗುತ್ತಿದೆ. ಸಂಬಂಧಪಟ್ಟವರು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಹೋರಾಟಕ್ಕೆ ಅಗತ್ಯ ಸಹಕಾರ ನೀಡಲಾಗುವುದು.”

-ಸೂದನ ಸತೀಶ್, ವಾಹನ ಚಾಲಕರ ಸಂಘದ ಅಧ್ಯಕ್ಷ

Tags:
error: Content is protected !!