ಗುಜರಾತ್‌ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್‌ ಆಯ್ಕೆ

ಅಹಮದಾಬಾದ್: ಪಾಟಿದಾರ್ ಸಮುದಾಯದ ನಾಯಕ ಮತ್ತು ಬಿಜೆಪಿ ಧುರೀಣ ಭೂಪೇಂದ್ರ ಪಟೇಲ್ ಅವರು ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ಹೊಸ ಸಿಎಂ ಆಗಿ ಪಟೇಲ್ ಪ್ರಮಾಣ ಸ್ವೀಕರಿಸುವ ಸಾಧ್ಯತೆ ಇದೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವ ತನಕ ವಿಜಯ ರೂಪಾನಿ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.

ರಾಜಧಾನಿ ಅಹಮದಾಬಾದ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನು ಬಿಜೆಪಿ ಎಲ್‌ಪಿ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಮತ್ತು ನರೇಂದ್ರ ಸಿಂಗ್ ತೋಮರ್ ಸಭೆಯ ವೀಕ್ಷಕರಾಗಿ ಪಾಲ್ಗೊಂಡಿದ್ದರು.

ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ ರೂಪಾನಿ ಶನಿವಾರ ದಿಢೀರ್ ರಾಜೀನಾಮೆ ನೀಡಿದ್ದರು. ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಅಂತಿಮ ತೆರೆ ಬಿದ್ದಂತಾಗಿದೆ.

ಭೂಪೇಂದ್ರ ಪಟೇಲ್ ಗುಜರಾತ್‌ನ ಘಾಟ್ ಲೋಡಿಯಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ರಾಜ್ಯದಲ್ಲಿ ಪ್ರಾಬಲ್ಯ ಹೊಂದಿರುವ ಪಾಟಿದಾರ್ ಸಮುದಾಯದ ಅಗ್ರ ಮುಖಂಡರಲ್ಲಿ ಒಬ್ಬರಾದ ಪಟೇಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಪ್ತರಾಗಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಪಾಟಿದಾರ್ ಸಮುದಾಯವನ್ನು ಒಲೈಸಲು ಆ ಜನಾಂಗದ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ಈ ಮುನ್ನವೇ ಪಕ್ಷದಲ್ಲಿ ಚರ್ಚೆಯಾಗಿತ್ತು. ವಿಧಾನಸಭೆ ಚುನಾವಣೆಗೆ ಇನ್ನು ೧೫ ತಿಂಗಳಿದ್ದು, ಬಿಜೆಪಿ ಈಗಿನಿಂದಲೇ ಕಾರ್ಯತಂತ್ರ ರೂಪಿಸುತ್ತದೆ.

× Chat with us