ಮೈಸೂರು ವಿವಿ ಉತ್ತರ ಪತ್ರಿಕೆ ಸೋರಿಕೆ ಪ್ರಕರಣ: 18 ವಿದ್ಯಾರ್ಥಿಗಳು ಭಾಗಿ!

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆಯ ಉತ್ತರ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಈ ಪ್ರಕರಣದಲ್ಲಿ ಒಟ್ಟು 18 ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ನಾರಾಯಣಸ್ವಾಮಿ ಇದುವರೆವಿಗೂ ವಿಚಾರಣೆಗೆ ಹಾಜರಾಗಿಲ್ಲ.

ಕಳೆದ ಮೂರು ತಿಂಗಳ ಹಿಂದೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಲಾಡ್ಜ್‌ವೊಂದರಲ್ಲಿ ಮಹಾರಾಣಿ ಕಾಲೇಜಿನ ನೌಕರ ಮೊಹಮದ್ ನಾಸಿರ್ ಹಾಗೂ ಇನ್ನಿತರರು ವಿದ್ಯಾ ರ್ಥಿಗಳಿಂದ ಉತ್ತರ ಪತ್ರಿಕೆ ಸಿದ್ಧಪಡಿಸುತ್ತಿದ್ದ ವೇಳೆ ಮಂಡಿ ಪೊಲೀಸರು ದಾಳಿ ನಡೆಸಿದ್ದರು. ಆದರೆ, ಯಾರ ವಿರುದ್ಧವೂ ಪ್ರಕರಣ ದಾಖಲಿಸದೆ ಬಿಟ್ಟು ಕಳುಹಿಸಿದ್ದರು.

ಈ ಸಂಬಂಧ ನಗರ ಪೊಲೀಸ್ ಆಯುಕ್ತರು ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದ್ದರು. ತನಿಖೆ ಆರಂಭಿಸಿದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳ ನ್ನು ವಶಕ್ಕೆ ಪಡೆದಿದ್ದರು. ಬಳಿಕ ಪ್ರಕರಣದ ಪ್ರಮುಖ ಆರೋಪಿಗಾಗಿ ಬಲೆ ಬೀಸಿದ್ದರಾದರೂ ಆತ ಇನ್ನೂ ಕೂಡ ಪೊಲೀಸರಿಗೆ ಸಿಕ್ಕಿಲ್ಲ.

ತನಿಖೆ ಆರಂಭಿಸಿದ ಪೊಲೀಸರಿಗೆ ಆಶ್ಚರ್ಯ ಕಾದಿತ್ತು. ಈ ಪ್ರಕರಣದಲ್ಲಿ ಮತ್ತಷ್ಟು ವಿದ್ಯಾರ್ಥಿಗಳು ಭಾಗಿಯಾಗಿರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಅಂತಿಮವಾಗಿ ಉತ್ತರ ಪತ್ರಿಕೆ ಸಿದ್ಧಪಡಿಸುವ ಪ್ರಕರಣದಲ್ಲಿ ಮೈಸೂರು ವಿವಿ ವ್ಯಾಪ್ತಿಯ ವಿವಿಧ ಕಾಲೇಜುಗಳ 18 ಮಂದಿ ವಿದ್ಯಾರ್ಥಿಗಳು ಭಾಗಿಯಾಗಿರುವುದು ಗೊತ್ತಾಗಿದೆ. ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ವಿಚಾರಣೆಗೆ ಹಾಜರಾಗದ ಇನ್‌ಸ್ಪೆಕ್ಟರ್

ಈ ವೇಳೆ ಹೋಟೆಲ್ ಮೇಲೆ ದಾಳಿ ನಡೆಸಿದ್ದ ಇನ್‌ಸ್ಪೆಕ್ಟರ್ ನಾರಾಯಣಸ್ವಾಮಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸದೆ ಕಳುಹಿಸಿದ್ದರು. ಈ ವೇಳೆ ಪೊಲೀಸ್ ಆಯುಕ್ತರು ಅವರನ್ನು ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತ್ತುಗೊಳಿಸಿದ್ದರು. ಈ ಸಂಬಂಧ ವಿಚಾರಣೆಗೆ ಆಗಮಿಸುವಂತೆ ನೊಟೀಸ್ ನೀಡಿದ್ದರೂ ನಾರಾಯಣ ಸ್ವಾಮಿ ಇದುವರೆಗೂ ವಿಚಾರಣೆಗೆ ಹಾಜರಾಗಿಲ್ಲ ಎನ್ನಲಾಗಿದೆ.

× Chat with us