ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ತೀವ್ರ ನಿಗಾ ವಹಿಸಿ ಅಂತಹವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಸೂಚನೆ ನೀಡಿದ್ದಾರೆ.
ಗುರುವಾರ ಬೆಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಗರದ ಎಲ್ಲ ವಿಭಾಗದ ಡಿಸಿಪಿಗಳ ಜೊತೆ ಡಿಜಿ ಅಲೋಕ್ ಮೋಹನ್ ಸಭೆ ನಡೆಸಿದರು.
ಸಾಮಾಜಿಕ ಜಾಲತಾಣಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ತೀವ್ರ ನಿಗಾ ಇಡಬೇಕು. ನಕಲಿ ಅಕೌಂಟ್ ಗಳನ್ನ ತೆರೆದು ಸರ್ಕಾರದ ಯೋಜನೆಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವ ಯತ್ನ ನಡೆಸಲಾಗುತ್ತಿದೆ. ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ತಮ್ಮ ವ್ಯಾಪ್ತಿಗೆ ವಿವಿಐಪಿಗಳ ಭೇಟಿ ಹೊರತುಪಡಿಸಿ ಎಲ್ಲ ದಿನಗಳಲ್ಲೂ ಠಾಣೆಗೆ ಭೇಟಿ ನೀಡಬೇಕು. ಠಾಣೆಯಲ್ಲಿ ಕರ್ತವ್ಯ ನಿರ್ವಹಣೆಯನ್ನು ಖುದ್ದು ಪರಿಶೀಲಿಸಬೇಕು. ನಂತರ ಇದರ ಬಗ್ಗೆ ತಮ್ಮ ಕಚೇರಿಗೆ ವರದಿ ಸಲ್ಲಿಸುವಂತೆ ಹೇಳಿದರು.
ಎಲ್ಲ ವಿಭಾಗದ ಡಿಸಿಪಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತಿನಿತ್ಯ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಬೇಕು ಹಾಗೂ ವಾರಕ್ಕೊಮ್ಮೆ ರಾತ್ರಿ ಗಸ್ತು ನಡೆಸಿ ಸಿಬ್ಬಂದಿ ಕಾರ್ಯನಿರ್ವಹಣೆ ಪರಿಶೀಲಿಸಿ ಅಪರಾಧ ಕೃತ್ಯಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬೇಕು ಎಂದು ಸೂಚನೆ ನೀಡಿದ್ದಾರೆ.