ಬೆಂಗಳೂರು : ‘ಆಪರೇಷನ್ ಹಸ್ತ’ದ ಚರ್ಚೆಯ ಬೆನ್ನಲ್ಲೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಹಾಗೂ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.
ಭಾನುವಾರ ಇಲ್ಲಿನ ಕುಮಾರ ಪಾರ್ಕ್‍ನಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವ ಸೋಮಶೇಖರ್, ‘ತಮ್ಮ ಕ್ಷೇತ್ರದ ಅಭಿವೃದ್ಧಿ ವಿಷಯದ ಜೊತೆಗೆ ಕಾಮಗಾರಿಗಳು, ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಬೇಕು’ ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಪತ್ರ ಸಲ್ಲಿಸಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸೋಮಶೇಖರ್, ‘ಇದು ಯಾವುದೇ ಕಾರಣಕ್ಕೂ ರಾಜಕೀಯ ಭೇಟಿಯಲ್ಲ, ಕೇವಲ ಯಶವಂತಪುರ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಸೀಮಿತವಾಗಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದೇನೆ. ಇದರ ಹಿಂದೆ ಯಾವುದೇ ಅನ್ಯ ಉದ್ದೇಶವಿಲ್ಲ’ ಎಂದು ಸ್ಪಷ್ಟಣೆ ನೀಡಿದ್ದಾರೆ.





