Mysore
28
broken clouds
Light
Dark

ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಮತ್ತು ಆಧಾರರಹಿತ: ಸಿಎಂ ಸಿದ್ದರಾಮಯ್ಯ

ಮೈಸೂರು : ಗುತ್ತಿಗೆದಾರರ ಮನೆಯಲ್ಲಿ ಹಣ ಪತ್ತೆಯಾಗಿರುವ ಬಗ್ಗೆ ಬಿಜೆಪಿ ಮಾಡುತ್ತಿರುವ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತವಾದದ್ದು. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗುತ್ತಿಗೆದಾರರ ಮನೆಯಲ್ಲಿ ಹಣ ಪತ್ತೆಯಾಗಿರುವ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ದುಡ್ಡು ವಸೂಲಿ ಮಾಡುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡಿದೆ. ಯಾರದೋ ಮನೆಯಲ್ಲಿ ಹಣ ಪತ್ತೆಯಾಗಿದ್ದು, ಇದಕ್ಕೆ ರಾಜಕೀಯ ನಂಟು ಹಾಕುವುದು ಸರಿಯಲ್ಲ.

ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ. ಲೋಕಸಭೆ ಚುನಾವಣೆ ಹಾಗೂ ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದಿಂದ ಯಾವುದೇ ತನಿಖೆಯ ಅವಶ್ಯಕತೆಯಿಲ್ಲ. ಪಂಚರಾಜ್ಯಗಳ ಚುನಾವಣೆಯ ಇರುವುದರಿಂದ ಕಾಂಗ್ರೆಸ್‌ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.

ಸುಳ್ಳು ಹೇಳಿಕೆ : ಕಾಂಗ್ರೆಸ್ ನಾಯಕರಿಗೆ ದುಡ್ಡು ಸಂಗ್ರಹಿಸುವ ಗುರಿ ನೀಡಿರುವುದಾಗಿ ಬಿಜೆಪಿಯ ಸಿ.ಟಿ.ರವಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸಿ.ಟಿ.ರವಿಯವರ ಹೇಳಿಕೆಗಳು ಸದಾ ಸುಳ್ಳಿನಿಂದ ಕೂಡಿರುತ್ತದೆ. ಅವರ ಸುಳ್ಳು ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ. ಈ ರೀತಿಯ ಎಲ್ಲ ಆರೋಪಗಳು ಸುಳ್ಳು ಮತ್ತು ಆಧಾರರಹಿತವಾಗಿದೆ ಎಂದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ