ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್ ಉಲ್ಬಣಗೊಂಡಿರುವ ಹಿನ್ನೆಲೆ ರಾಜ್ಯದಲ್ಲಿ ಕೋವಿಡ್ ಲಕ್ಷಣ ಕಂಡುಬಂದರೆ ಟೆಸ್ಟ್ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆ ರಾಜ್ಯ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ಬಳಿಕ ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕಳೆದ ಒಂದು ತಿಂಗಳಿಂದ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚಾಗುತ್ತಿವೆ. ವೈರಲ್ ಫೀವರ್ ಕಂಡುಬಂದರೆ ಕೊವಿಡ್ ಟೆಸ್ಟ್ ಮಾಡಲಾಗುವುದು. ಕೊವಿಡ್ ಲಕ್ಷಣ ಕಂಡು ಬಂದರೆ ಪರೀಕ್ಷೆ ಮಾಡುತ್ತೇವೆ ಎಂದು ಹೇಳಿದ್ದಾರೆ.
1 ತಿಂಗಳ ಟೆಸ್ಟ್ ಮಾಡಲು 3 ಲಕ್ಷ ಆರ್‌ಟಿಸಿಪಿಆರ್ ಟೆಸ್ಟಿಂಗ್ ಕಿಟ್ ಅಗತ್ಯವಿದೆ. ಔಷಧಿ, ಬೆಡ್ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಮಾಡಲು ಸೂಚನೆ ನೀಡಲಾಗಿದೆ. 3 ತಿಂಗಳಿಗೆ ಬೇಕಾಗುವಷ್ಟು ಕೊವಿಡ್ ಟೆಸ್ಟ್ ಕಿಟ್ ಖರೀದಿಗೆ ಸೂಚನೆ ನೀಡಲಾಗಿದೆ ಮತ್ತು ಡಿ.19ರಂದು ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಕೇರಳದಲ್ಲಿ ಕೊವಿಡ್ ಉಪ ತಳಿ ಪ್ರಕರಣ ದಿನೇದಿನೆ ಹೆಚ್ಚಳವಾಗುತ್ತಿದೆ. ಕರ್ನಾಟಕ ರಾಜ್ಯದಲ್ಲೂ 58 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಕೊರೊನಾ ಸೋಂಕಿತ 47 ಜನ ಹೋಮ್ ಐಸೋಲೇಷನ್ನಲ್ಲಿದ್ದಾರೆ. ಕೊರೊನಾ ಸೋಂಕಿತ 6 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಕ್ಟೋಬರ್ನಲ್ಲಿ ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಭ್ರೂಣಹತ್ಯೆ ಪತ್ತೆ ಟಾಸ್ಕ್ ಪೋರ್ಸ್ ರಚನೆ : ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ವಿಚಾರವಾಗಿ ಮುಂದಿನ ವಾರದೊಳಗೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲೂ ಟಾಸ್ಕ್ ಪೋರ್ಸ್ ರಚನೆ ಮಾಡಲು ಸಲಹೆ ಇದೆ. ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಕೂಡ ಒಂದೇ ಸಲಹೆ ನೀಡಿದೆ. ಕಾನೂನಾತ್ಮಕ ತೊಡಕು ವಿಚಾರವಾಗಿ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.