Mysore
25
mist

Social Media

ಶನಿವಾರ, 19 ಅಕ್ಟೋಬರ್ 2024
Light
Dark

ಪಟಾಕಿ ಗೋದಾಮಿನಲ್ಲಿ ಬೆಂಕಿ| ಮಾಲೀಕನ ಮೇಲೆ ಕ್ರಮ ಕೈಗೊಳ್ಳಲು ಸೂಚನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬೆಂಗಳೂರಿನ ಆನೇಕಲ್‌ನ ಅತ್ತಿಬೆಲೆ ಪಟಾಕಿ ಗೋದಾಮೊಂದರಲ್ಲಿ ನಿನ್ನೆ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಹೊತ್ತಿ ಉರಿದು 14 ಮಂದಿ ಕಾರ್ಮಿಕರು ಮೃತಪಟ್ಟ ದುರ್ಘಟನೆ ಸಂಬಂಧ ಗೋದಾಮು ಮಾಲೀಕನ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ. ಘಟನೆಯ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಭಾನುವಾರ ಬೆಳಗ್ಗೆ ತಿಳಿಸಿದ್ದಾರೆ.

ಲೈಸೆನ್ಸ್ ಪಡೆದು ಪಟಾಕಿಗಳನ್ನು ಮಾಡಿದ್ದಾರಾ? ಇಲ್ಲವೇ ಹಾಗೇ ಮಾಡಿದ್ದಾರೆಯೇ ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ‌ ಕೈಗೊಳ್ಳಲಾಗುವುದು.

20 ಕಾರ್ಮಿಕರಿದ್ದರು: ದೀಪಾವಳಿ ಹಬ್ಬಕ್ಕಾಗಿ ಮಳಿಗೆಯಲ್ಲಿ ಹೆಚ್ಚು ಪಟಾಕಿಗಳನ್ನು ಶೇಖರಣೆ ಮಾಡಲಾಗಿತ್ತು. ಆದರೆ, ಏಕಾಏಕಿ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ದುರಂತ ಸಂಭವಿಸಿದೆ. ಮಳಿಗೆಯಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 6 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನವೀನ್ ಎಂಬುವವರ ಪಟಾಕಿ ಮಳಿಗೆ ಇದಾಗಿದ್ದು, ಪಟಾಕಿ ಬಾಕ್ಸ್‌ಗಳನ್ನು ತಂದು ಲಾರಿಯಿಂದ ಅನ್‌ಲೋಡ್‌ ಮಾಡುವಾಗ ಈ ಅವಘಡ ಸಂಭವಿಸಿದೆ.

ಮೃತರಲ್ಲಿ ಏಳು ಜನ ಒಂದೇ ಗ್ರಾಮದವರು: ಅಗ್ನಿ ಅವಘಡದಲ್ಲಿ ಸಜೀವವಾಗಿ ದಹನಗೊಂಡ 14 ಜನರ ಪೈಕಿ ಏಳು ಮಂದಿ ಒಂದೇ ಗ್ರಾಮದವರು ಎಂದು ತಿಳಿದುಬಂದಿದೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಟಿ ಅಮ್ಮಾಪೇಟೆ ಎಂಬ ಗ್ರಾಮದ ಗಿರಿ, ಆದಿಕೇಶವನ್, ವಿಜಯ್ ರಾಘವನ್, ಇಲಂಬರದಿ, ಆಕಾಶ, ವೇಡಪನ್ ಸಚಿನ್ ಸೇರಿ ಏಳು ಯುವಕರು ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ರಾತ್ರಿ ಭೇಟಿ ನೀಡಿ ಪರಿಶೀಲಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಮೇಲ್ನೋಟಕ್ಕೆ ಗೋದಾಮಿನ ಮಾಲೀಕರ ನಿರ್ಲಕ್ಷ್ಯದಿಂದ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಗೋದಾಮು ಮಾಲೀಕ ಅಗ್ನಿಶಾಮಕ ನಿಯಮ ಉಲ್ಲಂಘಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ