BREAKING NEWS

ಅಮುಲ್ ಉತ್ಪನ್ನ ಖರೀದಿಸಲ್ಲ ಎಂದು ಕನ್ನಡಿಗರು ಪ್ರತಿಜ್ಞೆ ಮಾಡಬೇಕು: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಬಿಜೆಪಿಯ ದುರ್ಬಲ ನಾಯಕತ್ವದಿಂದಾಗಿ ನಾಡಿನ ಲಕ್ಷಾಂತರ ಹೈನುಗಾರಿಕೆ ಕುಟುಂಬಗಳ ಜೀವನಾಧಾರವಾಗಿರುವ ಕೆಎಂಎಫ್ ಅನ್ನು ಬಲಿಪಡೆಯುವ ಎಲ್ಲಾ ರೀತಿಯ ಪ್ರಯತ್ನಗಳು ಆರಂಭವಾಗಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ನೇರ ಕಾರಣ ಎಂದು ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ಕಿಡಿಕಾರಿದ್ದಾರೆ.

ಅಮುಲ್ ಐಸ್‌ಕ್ರೀಮ್ ಸೇರಿ ಹಲವು ಉತ್ಪನ್ನಗಳನ್ನು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಅಮುಲ್, ಈಗ ಹಾಲು ಮತ್ತು ಮೊಸರನ್ನು ಮಾರುಕಟ್ಟೆಗೆ ಇಳಿಸಲು ಮುಂದಾಗಿದೆ. ಕ್ವಿಕ್ ಕಾರ್ಮರ್ಸ್‌ ಪ್ಲಾಟ್‌ಫಾರ್ಮ್ ಮೂಲಕ ಗುರುವಾರದಿಂದ ಮನೆಗಳಿಗೆ ತಲುಪಿಸಲು ಹೊರಟಿದೆ. ಈ ಬಗ್ಗೆ ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, . ‘ಗೋ ಬ್ಯಾಕ್ ಅಮುಲ್‌’ ಅಭಿಯಾನ ಆರಂಭಿಸುವ ಎಚ್ಚರಿಕೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಈ ಹೋರಾಟಕ್ಕೆ ಧನಿಗೂಡಿಸಿದ್ದಾರೆ.

‘ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ’ ಎಂದು ಅವರು ತಿಳಿಸಿದ್ದಾರೆ.

‘ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್‌ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್‌ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ’ ಎಂದು ಅವರು ಆರೋಪಿಸಿದ್ದಾರೆ.

‘ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ಬಿಜೆಪಿ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್ ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ ಬಿಜೆಪಿ?’ ಎಂದು ಪ್ರಶ್ನಿಸಿದ್ದಾರೆ.

‘ನಮ್ಮ ಸರ್ಕಾರ ಹಾಲಿಗೆ ನೀಡುವ ಸಹಾಯಧನವನ್ನು ಲೀಟರಿಗೆ 5 ಗಳಷ್ಟು ಹೆಚ್ಚಿಸಿದ್ದೆವು. ಇದರಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಈಗ ಕಡಿಮೆಯಾಗುತ್ತ ಸಾಗಲು ಕಾರಣ ಏನು ಬಿಜೆಪಿ? ನಮ್ಮ ಸರ್ಕಾರವು ಐದು ವರ್ಷಗಳಲ್ಲಿ 1,356 ಕೋಟಿ ಹಾಲಿನ ಸಹಾಯಧನಕ್ಕಾಗಿ ರೈತರಿಗೆ ಕೊಟ್ಟಿತ್ತು. ಆದರೆ ಬಿಜೆಪಿ ಸರ್ಕಾರ 2020 -21 ರಲ್ಲಿ 1,186 ಕೋಟಿ ಮಾಡಿದ್ದರೆ, 2023-24ಕ್ಕೆ ಕೇವಲ 1,200 ಕೋಟಿ ಬಜೆಟ್‌ನಲ್ಲಿ ಒದಗಿಸಿ ರೈತರಿಗೆ ಅನ್ಯಾಯ ಮಾಡಿದೆ’ ಎಂದು ಸಿದ್ದರಾಮಯ್ಯ ಅವರು ದೂರಿದ್ದಾರೆ.

‘ಕರ್ನಾಟಕದ ಬಿಜೆಪಿ ನಾಯಕತ್ವ ಎಷ್ಟೊಂದು ದುರ್ಬಲವಾಗಿದೆಯೆಂದರೆ ಒಂದೆಡೆ ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ. ಹಿಂದಿ ಹೇರಿಕೆಯ ಮೂಲಕ ನಡೆಸುತ್ತಿರುವ ಭಾಷಾದ್ರೋಹ ಮತ್ತು ರಾಜ್ಯದ ಗಡಿಯೊಳಗೆ ಅತಿಕ್ರಮಿಸುವ ಮೂಲಕ ನಡೆಸುತ್ತಿರುವ ನೆಲದ್ರೋಹದ ಜೊತೆಗೆ ಈಗ ಕೆಎಂಎಫ್ ಅನ್ನು ಮುಚ್ಚಿಸುವ ಮೂಲಕ ರೈತದ್ರೋಹ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ’ ಎಂದು ಅವರು ಹೇಳಿದ್ದಾರೆ.

‘ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಎಫ್‌ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕಾಗುತ್ತದೆ. ಅಮುಲ್ ಉತ್ಪನ್ನಗಳನ್ನು ಖರೀದಿಸುವುದಿಲ್ಲ ಎಂದು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು. ಮುಖ್ಯಮಂತ್ರಿ ಬೊಮ್ಮಾಯಿ ಅವರು ತಕ್ಷಣ ಮಧ್ಯಪ್ರವೇಶಿಸಿ ಹಿಂಬಾಗಿಲಿನಿಂದ ಪ್ರವೇಶಿಸುತ್ತಿರುವ ಅಮುಲ್ ಸಂಸ್ಥೆಯನ್ನು ತಡೆಯಬೇಕಾಗಿದೆ. ಈ ಸಂಬಂಧ ಕೇಂದ್ರ ಗೃಹಸಚಿವರಾದ ಅಮಿತ್‌ ಶಾ ಅವರಿಗೆ ರಾಜ್ಯದ ಜನಾಭಿಪ್ರಾಯವನ್ನು ಗಮನಕ್ಕೆ ತಂದು ಈ ದ್ರೋಹ ಚಿಂತನೆಯನ್ನು ನಿಲ್ಲಿಸಬೇಕು’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

andolanait

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

38 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

49 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

56 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago