ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ಧದ ಎಫ್ಐಆರ್ ನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಮೇ ತಿಂಗಳಲ್ಲಿ ನಡೆದ ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಮಾಡಿದ್ದ ಭಾಷಣದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ನಡ್ಡಾ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯ ಐಬಿ ವೃತ್ತದಲ್ಲಿ ಮೇ.07 ರಂದು ಮಾತನಾಡಿದ್ದ ಜೆಪಿ ನಡ್ಡಾ, ರಾಜ್ಯದಲ್ಲಿ ಬಿಜೆಪಿ ಚುನಾವಣೆ ಸೋತರೆ, ರಾಜ್ಯ ಕೇಂದ್ರದ ಯೋಜನೆಗಳಿಂದ ವಂಚಿತವಾಗುತ್ತದೆ ಎಂದು ಹೇಳಿದ್ದರು. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಕಿಸಾನ್ ನಿಧಿ ಯಂತಹ ಕೇಂದ್ರ ಸರ್ಕಾರದ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದೂ ನಡ್ಡಾ ಹೇಳಿದ್ದರು.
ಈ ವಿಭಾಗದ ಚುನಾವಣಾ ಅಧಿಕಾರಿಗಳು ಹರಪನಹಳ್ಳಿಯ ಪೊಲೀಸ್ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ನಡ್ಡಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ತಮ್ಮ ವಿರುದ್ಧದ ತನಿಖೆಯನ್ನು ರದ್ದುಗೊಳಿಸಬೇಕೆಂದು ನಡ್ಡಾ ಹೈಕೋರ್ಟ್ ಮೊರೆ ಹೋಗಿದ್ದರು.