ಬೆಂಗಳೂರು : ಇಡೀ ದೇಶ ಕಾತುರದಿಂದ ಕಾಯುತ್ತಿರುವ ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್. ಎಸ್ ಬೋಸರಾಜು ಅವರು ರಾಜ್ಯದ ಪ್ರಾದೇಶಿಕ ಹಾಗೂ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳಿಗೆ ಸೂಚನೆ ನೀಡಿದ್ದಾರೆ.
ಈ ಸೂಚನೆಯ ಅನ್ವಯ ಈಗಾಗಲೇ ಬೆಂಗಳೂರು ನಗರದ ಜವಾಹರ್ ಲಾಲ್ ನೆಹರು ತಾರಾಲಯ, ಮಂಗಳೂರಿನ ಪಿಲಿಕುಳ ವಿಜ್ಞಾನ ಕೇಂದ್ರ ಹಾಗೂ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇನ್ನುಳಿದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳಲ್ಲೂ ನೇರಪ್ರಸಾರದ ವ್ಯವಸ್ಥೆ ಮಾಡಿಕೊಳ್ಳುವಂತೆ ಹಾಗೂ ಸಿಬ್ಬಂದಿಗಳಿಂದ ಮತ್ತು ವಿಷಯ ತಜ್ಞರಿಂದ ಚಂದ್ರಯಾನ-3 ರ ಮಾಹಿತಿ ಮತ್ತು ವೈಶಿಷ್ಟ್ಯಗಳನ್ನು ವಿವರಣೆ ನೀಡುವ ವ್ಯವಸ್ಥೆ ಕಲ್ಪಿಸುವಂತೆಯೂ ಸೂಚನೆ ನೀಡಲಾಗಿದೆ.
ಇಂದು ಸಂಜೆ 5 ಗಂಟೆಗೆ ಖುದ್ದು ಸಚಿವರು ಬೆಂಗಳೂರಿನ ಜವಾಹರ್ ಲಾಲ್ ನೆಹರು ತಾರಾಯಲಯದಲ್ಲಿ ಸಾರ್ವಜನಿಕರೊಂದಿಗೆ ನೇರ ಪ್ರಸಾರವನ್ನು ವೀಕ್ಷಿಸಲಿದ್ದಾರೆ.