ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತರಗತಿ: ಮಾಸಾಂತ್ಯಕ್ಕೆ ಸಭೆ: ಸಚಿವ ಸುರೇಶ್‌ಕುಮಾರ್‌

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸುವ ಸಂಬಂಧ ಡಿಸೆಂಬರ್ ಮಾಸಾಂತ್ಯಕ್ಕೆ ಸಭೆ ನಡೆಸುವುದಾಗಿ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಸಭೆಯ ಸಾರಂಶವನ್ನು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಸಚಿವರು, ವಿದ್ಯಾಗಮ ಕಾರ್ಯಕ್ರಮವನ್ನು ಪುನರಾರಂಭಿಸುವ ಬಗ್ಗೆ ರೂಪುರೇಷಗಳನ್ನು ಸಿದ್ಧಪಡಿಸಿ ಕಡತದಲ್ಲಿ ಮಂಡಿಸಲಾಗುವುದು. ಸಿಆರ್‌ಪಿ ಮತ್ತು ಬಿಆರ್‌ಪಿಗಳಿಗೆ ಈ ಸಾಲಿನ ವರ್ಗಾವಣೆಯಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುವುದು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಕಡ್ಡಾಯ ವರ್ಗಾವಣೆಯಾಗಿದ್ದಲ್ಲಿ ಅವರಿಗೂ ಸಹ ಈ ಬಾರಿ ವರ್ಗಾವಣೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು.

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ನೀಡಲಾದ ಎಲ್ಲ ವಿಶೇಷ ಭತ್ಯೆಗಳನ್ನು ವಸೂಲಾತಿ ಮಾಡುವಲ್ಲಿ ಸಿ ಮತ್ತು ಡಿ ಗುಂಪಿಗೆ ಸೇರಿದ ನೌಕರರಿಂದ ವಸೂಲಾತಿ ಮಾಡಬಾರದೆಂಬ ಸುಪ್ರೀಂ ಕೋರ್ಟಿನ ತೀರ್ಪಿನ ಹಿನ್ನೆಲೆಯಲ್ಲಿ ಪರಾಮರ್ಶಿಸಿ ಮಂಡಿಸುವುದು, ನ್ಯಾಯಲಯದ ಆದೇಶವನ್ನು ಸಂಪೂರ್ಣವಾಗಿ ಪರಿಶೀಲಿಸಿ ನಿರ್ಣಯವನ್ನು ತೆಗೆದುಕೊಳ್ಳುವವರೆಗೆ ವಸೂಲಾತಿ ಪ್ರಕ್ರಿಯೆಯನ್ನು ತಡೆಹಿಡಿಯಲು ಗತ್ಯ ಕ್ರಮ ವಹಿಸುವುದು.

ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಹೊಸದಾಗಿ ನೇಮಕವಾದ ಸೇವಾ ನಿರತ ಪದವಿ ಪೂರ್ವ ಶಿಕ್ಷಣ ಉಪನ್ಯಾಸ ಅಭ್ಯರ್ಥಿಗಳ ಪೈಕಿ ಹಲವು ಅಭ್ಯರ್ಥಿಗಳು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಗಳಿಂದ ನಿರಾಕ್ಷೇಪಣಾ ಪ್ರಮಾಣ ಪತ್ರಗಳನ್ನು ನೀಡಬೇಕೆಂದು ಆಗ್ರಹಿಸಿದ್ದು, ಈ ಬಗ್ಗೆ ಕೂಡಲೇ ಕ್ರಮ ವಹಿಸಲಾಗುವುದು. ಆರ್ಥಿಕ ಮಿತವ್ಯಯದ ಹಿನ್ನೆಲೆಯಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ನೇಮಕಾತಿ ಸ್ಥಗಿತಗೊಂಡಿದ್ದು, ಈ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಕೂಡಲೇ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಸಚಿವರು ತಿಳಿಸಿದ್ದಾರೆ.

× Chat with us