ಅಭಿವೃದ್ಧಿ ಹೆಸರಿನಲ್ಲಿ ಬಿಜೆಪಿ ಸರ್ಕಾರದಿಂದ ಸುಳ್ಳು ಆಶ್ವಾಸನೆ: ಅನಿಲ್‌ ಚಿಕ್ಕಮಾದು ಟೀಕೆ

ಮೈಸೂರು: ಎಚ್‌.ಡಿ.ಕೋಟೆಯಲ್ಲಿ ನನೆಗುದಿಗೆ ಬಿದ್ದಿರುವ ಕಾಮಗಾರಿಗಳಿಗೆ ನೂತನ ಮುಖ್ಯಮಂತ್ರಿಗಳು ಚಾಲನೆ ನೀಡಲಿ ಎಂದು ಶಾಸಕ ಅನಿಲ್‌ ಚಿಕ್ಕಮಾದು ಆಗ್ರಹಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ನಮ್ಮ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಕಳೆದ ವರ್ಷ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಲು ಆಗಮಿಸಿದ ವೇಳೆ ಹಲವು ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದ್ದರು. ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದ್ದರು. ಆದರೆ, ಇದುವರೆಗೆ ಒಂದು ಕಾಮಗಾರಿಯೂ ಆರಂಭವಾಗಿಲ್ಲ. ಅಭಿವೃದ್ದಿ ವಿಚಾರದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಕೇವಲ ಸುಳ್ಳು ಆಶ್ವಾಸನೆಗಳನ್ನು ನೀಡುತ್ತಾ ಬಂದಿದೆ. ಸರ್ಕಾರ ನೀಡುತ್ತಿರುವ ಸುಳ್ಳು ಭರವಸೆಗಳಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಾದರೂ ಎಚ್‌.ಡಿ.ಕೋಟೆ ಕ್ಷೇತ್ರದಲ್ಲಿ ನನೆಗುದಿಗೆ ಬಿದ್ದಿರುವ ಕಾಮಗಾರಿಗಳಿಗೆ ಚಾಲನೆ ನೀಡಬೇಕು. ಸಿಎಂ ಬಸವರಾಜ ಬೊಮ್ಮಾಯಿ ಅವರು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬಂದಾಗ ಈ ಸಂಬಂಧ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಬಡವರಿಗೆ ಮನೆ ಹಂಚುವ ಅಧಿಕಾರವನ್ನು ಶಾಸಕರಿಂದ ಸರ್ಕಾರ ಕಿತ್ತುಕೊಂಡಿದೆ. ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ 520 ಮನೆಗಳನ್ನು ಹಂಚಿಕೆ ಮಾಡುವ ಅಧಿಕಾರ ಶಾಸಕರಿಗಿತ್ತು. ಆದರೆ ಈಗ ಅದನ್ನು ಕಸಿದುಕೊಂಡಿರುವ ಸರ್ಕಾರ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ 20 ಮನೆಗಳನ್ನು ವಿತರಿಸಲು ಆಯಾ ಗ್ರಾಪಂಗೆ ಅಧಿಕಾರ ನೀಡಿದೆ. ಈ ಮೂಲಕ ಶಾಸಕರ ಅಧಿಕಾರವನ್ನು ರಾಜ್ಯ ಸರ್ಕಾರ ಮೊಟಕು ಮಾಡಿದೆ ಎಂದು ಹರಿಹಾಯ್ದರು.

× Chat with us