Mysore
26
light rain

Social Media

ಭಾನುವಾರ, 03 ನವೆಂಬರ್ 2024
Light
Dark

ಆ.26ರಂದು ಇಸ್ರೋ ಕೇಂದ್ರ ಕಚೇರಿಗೆ ತೆರಳಿ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು : ವಿಕ್ರಂ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಸಿ ಜಗತ್ತಿಗೆ ಸಾಧ್ಯವಾಗದ ಸಾಧನೆಯನ್ನು ಇದೀಗ ಇಸ್ರೋ ಮಾಡಿ ತೋರಿಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26ರಂದು ಬೆಳಗ್ಗೆ ಬೆಂಗಳೂರಿಗೆ ಭೇಟಿ ನೀಡಲಿದ್ದು, ಇಸ್ರೋ ಕೇಂದ್ರ ಕಚೇರಿಗೆ ತೆರಳಿ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ.

ಬ್ರಿಕ್ಸ್ ಶೃಂಗಸಭೆ ಹಿನ್ನೆಲೆ ನರೇಂದ್ರ ಮೋದಿ ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಪ್ರವಾಸದಲ್ಲಿದ್ದಾರೆ. ಸಭೆಯ ನಡುವೆಯೂ ಮೋದಿ ಚಂದ್ರಯಾನ ಲ್ಯಾಂಡಿಂಗ್ ಪ್ರಕ್ರಿಯೆಯನ್ನು ಲೈವ್ ಆಗಿ ವೀಕ್ಷಿಸಿದ್ದರು. ಯಶಸ್ವಿ ಲ್ಯಾಂಡಿಂಗ್ ಬಳಿಕ ವಿಜ್ಞಾನಿಗಳನ್ನು ಅಭಿನಂದಿಸಿದ್ದರು.

ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಬಳಿಕ ಇಸ್ರೋ ಅಧ್ಯಕ್ಷ ಸೋಮನಾಥ್ ಜೊತೆ ಮೋದಿ ದೂರವಾಣಿ ಮೂಲಕ ವೈಯಕ್ತಿಕವಾಗಿ ಮಾತುಕತೆ ನಡೆಸಿದ್ದರು. ಆದರೂ ಮೋದಿ ಇದೀಗ ಬೆಂಗಳೂರಿಗೆ ಬರಲಿದ್ದು, ಇಸ್ರೋ ಕಚೇರಿಗೆ ತೆರಳಿ ಅಭಿನಂದನೆ ಸಲ್ಲಿಸಲು ನಿರ್ಧರಿಸಿದ್ದಾರೆ. ಅತ್ಯುನ್ನತ ಸಾಧನೆ ಮಾಡಿದ ವಿಜ್ಞಾನಿಗಳಿಗೆ ಗೌರವ ನೀಡಲಿದ್ದಾರೆ.

ಬುಧವಾರ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆಗುತ್ತಿದ್ದಂತೆಯೇ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಪ್ರಧಾನಿ ಮೋದಿ ಸಂಭ್ರಮ ಹಂಚಿಕೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ನಾನು ದಕ್ಷಿಣ ಆಫ್ರಿಕಾದಲ್ಲಿದ್ದೇನೆ. ಆದರೆ ನನ್ನ ಮನಸ್ಸು ಚಂದ್ರಯಾನ ಮೇಲಿತ್ತು. ಚಂದ್ರಯಾನ ಯಶಸ್ವಿ ಜನರಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ. ನಾನು ನಮ್ಮ ಜನರ ಖುಷಿಯ ಸಮಯದಲ್ಲಿ ಭಾಗಿಯಾಗಿದ್ದೇನೆ. ನಾನು ಇಸ್ರೋ ಮತ್ತು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ